ಹೊರಗಿನವರಿಗೆ ರಾಜ್ಯ ಗಡಿ ಬಂದ್

29/05/2020

ಬೆಂಗಳೂರು ಮೇ 28 : ರಾಜ್ಯದಲ್ಲಿ ನೆರೆ ರಾಜ್ಯಗಳಿಂದ ಕೊರೋನಾ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹೆಚ್ಚಾಗಿರುವ ಮಹಾರಾಷ್ಟ್ರ, ತಮಿಳುನಾಡು ಹಾಗೂ ಗುಜರಾತ್ ಸೇರಿದಂತೆ ಹಲವು ರಾಜ್ಯಗಳ ಪ್ರಯಾಣಿಕರಿಗೆ ಗಡಿ ಬಂದ್ ಮಾಡುವ ಕಟ್ಟುನಿಟ್ಟನ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.
ಗುಜರಾತ್, ಮಹಾರಾಷ್ಟ್ರ, ತಮಿಳುನಾಡು, ಮಧ್ಯಪ್ರದೇಶ, ಹಾಗೂ ರಾಜಸ್ತಾನದಿಂದ ಬರುವ ಪ್ರಯಾಣಿಕ ವಿಮಾನಗಳನ್ನು ಸಧ್ಯಕ್ಕೆ ನಿಷೇಧಿಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಮಹಾರಾಷ್ಟ್ರ, ತಮಿಳುನಾಡು, ಗುಜರಾತ್ ರಾಜ್ಯಗಳ ಭೂ ಮಾರ್ಗದ ಗಡಿಗಳನ್ನು ಈಗಾಗಲೇ ಬಂದ್ ಮಾಡಿದ್ದು, ಈ ಆದೇಶವನ್ನು ಇನ್ನೂ 15 ದಿನಗಳ ಕಾಲ ಮುಂದುವರೆಸಲು ತೀರ್ಮಾನಿಸಲಾಗಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಮುಂದಿನ 15 ದಿನಗಳ ಕಾಲ ಮಹಾರಾಷ್ಟ್ರ, ಮಧ್ಯ ಪ್ರದೇಶ, ರಾಜಸ್ಥಾನ, ತಮಿಳುನಾಡು ಮತ್ತು ಗುಜರಾತ್ ನಿಂದ ಬರುವವರಿಗೆ ನಿರ್ಬಂಧ ವಿಧಿಸಲಾಗಿದೆ ಎಂದರು.