ಮಾಜಿ ಸಿಎಂ ಜೊತೆ ವಿಡಿಯೋ ಕಾನ್ಫರೆನ್ಸ್ : ಸಮಸ್ಯೆಗಳನ್ನು ವಿವರಿಸಿದ ಗಣೇಶ್

02/06/2020

ಮಡಿಕೇರಿ ಜೂ.2 : ಕೊಡಗು ಜಿಲ್ಲೆ ಅನುಭವಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಜಾತ್ಯಾತೀತ ಜನತಾ ದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಗಮನ ಸೆಳೆದಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿದ ಗಣೇಶ್, ಲಾಕ್‍ಡೌನ್‍ನಿಂದಾಗಿ ಎಲ್ಲಾ ವರ್ಗದ ಜನರು ಸಂಕಷ್ಟವನ್ನು ಎದುರಿಸುತ್ತಿದ್ದು, ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಮತ್ತಷ್ಟು ನೆರವಿನ ಅಗತ್ಯವಿದೆ ಎಂದು ತಿಳಿಸಿದರು.
2018ರಲ್ಲಿ ಸಂಭವಿಸಿದ ಅತಿವೃಷ್ಟಿಯಲ್ಲಿ ಮನೆಗಳನ್ನು ಕಳೆದುಕೊಂಡು ಅತಂತ್ರರಾದವರಿಗೆ ತಮ್ಮ ಸಕಾಲದ ಸ್ಪಂದನೆಯಿಂದ ನಿರ್ಮಿಸಲಾಗಿರುವ ನೂತನ ಮನೆಗಳ ಹಸ್ತಾಂತರ ಕಾರ್ಯಕ್ರಮ ನಡೆಯುತ್ತಿದೆ ಎಂದು ಗಮನ ಸೆಳೆದರು.
ಜಿಲ್ಲೆಯ ಕೂಲಿ ಕಾರ್ಮಿಕರು, ರೈತರು ಹಾಗೂ ಬೆಳೆಗಾರರು ವನ್ಯಜೀವಿ ದಾಳಿಯಿಂದ ಕಷ್ಟನಷ್ಟಗಳನ್ನು ಅನುಭವಿಸುತ್ತಿದ್ದು, ಈಗಿನ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲವೆಂದು ಗಣೇಶ್ ಟೀಕಿಸಿದರು.
ಕೊಡಗಿನ ಸಮಸ್ಯೆಗಳನ್ನು ಬಗೆಹರಿಸಲು ತಮ್ಮ ನೇತೃತ್ವದಲ್ಲಿ ಹೋರಾಟ ನಡೆಯಬೇಕಿದೆ ಎಂದು ಗಣೇಶ್ ಅವರು ಹೆಚ್.ಡಿ.ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದರು.