ಪ್ರಕೃತಿ ವಿಕೋಪ : ಮುನ್ನೆಚ್ಚರಿಕಾ ಕ್ರಮಗಳಿಗೆ ಜಿಲ್ಲಾಧಿಕಾರಿ ಸೂಚನೆ : 16 ಹೋಬಳಿಗಳಲ್ಲಿ ನೋಡಲ್ ಅಧಿಕಾರಿಗಳ ನಿಯೋಜನೆ

ಮಡಿಕೇರಿ ಜೂ.3 : ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಕಮಾಂಡರ್, ಪೊಲೀಸ್ ಹಾಗೂ ನೋಡಲ್ ಅಧಿಕಾರಿಗಳೊಂದಿಗೆ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಎದುರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಸಭೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಜಿಲ್ಲೆಯ 16 ಹೋಬಳಿಗಳಲ್ಲಿ ಪ್ರಕೃತಿ ವಿಕೋಪ ಎದುರಿಸುವ ಸಂಬಂಧ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಅಧಿಕಾರಿಗಳ ಜೊತೆ ಎನ್ಡಿಆರ್ಎಫ್ ತಂಡ ಸಮನ್ವಯತೆ ಸಾಧಿಸಿ ಕಾರ್ಯನಿರ್ವಹಿಸುವಂತೆ ಸಲಹೆ ಮಾಡಿದರು.
ಪ್ರಕೃತಿ ವಿಕೋಪವನ್ನು ಎದುರಿಸುವ ನಿಟ್ಟಿನಲ್ಲಿ ಎನ್ಡಿಆರ್ಎಫ್ ತಂಡಕ್ಕೆ ಬೇಕಿರುವ ಅಗತ್ಯ ಸಾಮಾಗ್ರಿಗಳನ್ನು ಒದಗಿಸುವ ಬಗ್ಗೆ ಚರ್ಚೆ ನಡೆಯಿತು.
ಎನ್ಡಿಆರ್ಎಫ್, ಪೊಲೀಸ್, ಅಗ್ನಿಶಾಮಕ ಇಲಾಖೆ, ಹೋಂ ಗಾರ್ಡ್ ತಂಡಗಳು ಒಟ್ಟುಗೂಡಿ ಅಣಕು ಪ್ರದರ್ಶನ ಏರ್ಪಡಿಸುವುದು ಸೇರಿದಂತೆ ಮತ್ತಿತರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಆಂಧ್ರ್ರಪ್ರದೇಶದ ಗುಂಟೂರಿನಿಂದ ಆಗಮಿಸಿರುವ 10ನೇ ಬೆಟಾಲಿಯನ್ ಕಮಾಂಡರ್ ಉಪಾಧ್ಯ, ಡಿವೈಎಸ್ಪಿ ದಿನೇಶ್ ಕುಮಾರ್, ನೋಡಲ್ ಅಧಿಕಾರಿ ಪಿ.ಶ್ರೀನಿವಾಸ್, ಜಿಲ್ಲಾ ವಿಪತ್ತು ನಿರ್ವಹಣಾ ವಿಭಾಗದ ಅಧಿಕಾರಿ ಅನನ್ಯ ವಾಸುದೇವ ಎನ್ಡಿಆರ್ಎಫ್ ತಂಡದ ಸದಸ್ಯರು ಮತ್ತಿತರರು ಪಾಲ್ಗೊಂಡಿದ್ದರು.