ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಇಲ್ಲ

ಬೆಂಗಳೂರು ಜೂ.15 : ಕೋವಿಡ್-19 ಸೋಂಕು ನಿಯಂತ್ರಣ ಉದ್ದೇಶದಿಂದ ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಜಾರಿ ಮಾಡುವ ಉದ್ದೇಶವಿಲ್ಲ. ಆದರೆ ಜನ ಜಾಗೃತಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಕುರಿತಂತೆ ಮಹತ್ವದ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಅಷ್ಟೇ ಅಲ್ಲದೇ ವಾರಾಂತ್ಯದ ಕಫ್ರ್ಯೂ ಸಹ ಜಾರಿಗೊಳಿಸುವುದಿಲ್ಲ, ಆದರೆ ಜನರಲ್ಲಿ ಮಾಸ್ಕ್ ಧರಿಸುವ ಕುರಿತು ಮತ್ತಷ್ಟು ಜನಜಾಗೃತಿ ಮೂಡಿಸಲಾಗುವುದು. ಇದೇ ಉದ್ದೇಶದಿಂದ ಗುರುವಾರ ಮಾಸ್ಕ್ ಡೆ ಆಚರಣೆ ಮಾಡಲು ತೀರ್ಮಾನಿಸಲಾಗಿದೆ ಎಂದರು.
ಚಿತ್ರ ನಟರು, ಗಣ್ಯರು, ಮಾಸ್ಕ್ ಧರಿಸುವ ಮತ್ತು ವ್ಯಕ್ತಿಗತ ಅಂತರ ಕಾಪಾಡಿಕೊಳ್ಳುವ ಕುರಿತು ಜನಜಾಗೃತಿ ಮೂಡಿಸಬೇಕು, ಮಾಸ್ಕ್ ಧರಿಸದಿದ್ದರೆ 200 ರೂಪಾಯಿ ದಂಡ ವಿಧಿಸಲಾಗುವುದು. ಈ ಸಂಬಂಧ ಕಟ್ಟುನಿಟ್ಟಿನ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಯಡಿಯೂರಪ್ಪ ಎಚ್ಚರಿಕೆ ನೀಡಿದರು.
ಮಹಾರಾಷ್ಟ್ರದಿಂದ ಆಗಮಿಸುವವರಿಗೆ 7 ದಿನ, ಚೆನ್ನೈ, ದೆಹಲಿಯಿಂದ ಬರುವವರಿಗೆ ಮೂರು ದಿನಗಳ ಕಾಲ ಕ್ವಾರಂಟೀನ್ ಮಾಡಲಾಗುವುದು. ಹೊರ ರಾಜ್ಯಗಳಿಂದ ಆಗಮಿಸುವವರಿಂದ ಸೋಂಕು ಹರಡುವುದನ್ನು ತಡೆಗಟ್ಟಲು ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
