ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ನಡೆದ ದ್ವೀತಿಯ ಪಿಯುಸಿ ಪರೀಕ್ಷೆ

18/06/2020

ಮಡಿಕೇರಿ ಜೂ.18 : ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಗುರುವಾರ ರಾಜ್ಯಾದ್ಯಂತ ನಡೆದ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಆಯೋಜಿಸಲಾಯಿತು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಶಿವಲಿಂಗ ಶೆಟ್ಟಿ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 5,927 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು ಗುರುವಾರ ನಡೆದ ಇಂಗ್ಲೀಷ್ ಪರೀಕ್ಷೆಗೆ 140 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು 5,787 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ಮೂಲಕ ಶೇ.97.63 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದಾರೆ.
ಒಟ್ಟು 5,927 ವಿದ್ಯಾರ್ಥಿಗಳಲ್ಲಿ ಹೊರ ಜಿಲ್ಲೆಯ 481 ವಿದ್ಯಾರ್ಥಿಗಳಿದ್ದು ಅವರಲ್ಲಿ 13 ಜನ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದು, ಹೊರ ಜಿಲ್ಲೆಯ 468 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದಾರೆ. ಜೊತೆಗೆ ಹೊರ ರಾಜ್ಯದ 10 ಮಂದಿ ವಿದ್ಯಾರ್ಥಿಗಳೂ ಸಹ ಪರೀಕ್ಷೆಗೆ ಹಾಜರಾಗಿದ್ದಾರೆ. ಅಲ್ಲದೆ ಜಿಲ್ಲೆಯ 5,436 ವಿದ್ಯಾರ್ಥಿಗಳ ಪೈಕಿ 127 ಜನ ಗೈರು ಹಾಜರಾಗಿದ್ದು, 5309 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಇತರ ವಿದ್ಯಾರ್ಥಿಗಳ ಆರೋಗ್ಯದ ಹಿತ ದೃಷ್ಠಿಯಿಂದ ಹೊರ ರಾಜ್ಯದಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ನಡೆಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮಾಹಿತಿ ನೀಡಿದ್ದಾರೆ.
ಜಿಲ್ಲೆಯ ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷಾ ಕೊಠಡಿಗಳಿಗೆ ಸೋಂಕು ನಿವಾರಕಗಳನ್ನು ಸಿಂಪಡಿಸಲಾಗಿತ್ತು. ಅಲ್ಲದೆ ಪ್ರತಿಯೊಬ್ಬ ವಿದ್ಯಾರ್ಥಿಯು ಮಾಸ್ಕ್ ಧರಿಸಿ ಪರೀಕ್ಷೆ ಬರೆದಿದ್ದಾರೆ. ಜೊತೆಗೆ ಪರೀಕ್ಷೆಗೆ ಮುನ್ನ ಪ್ರತಿ ವಿದ್ಯಾರ್ಥಿಗೂ ಸಹ ಥರ್ಮಲ್ ಸ್ಕ್ಯಾನಿಂಗ್, ಹ್ಯಾಂಡ್ ಸ್ಯಾನಿಟೈಸರ್ ನೀಡಿ ಪರೀಕ್ಷಾ ಕೊಠಡಿ ಪ್ರವೇಶ ನೀಡಲಾಯಿತು. ಜೊತೆಗೆ ಪರೀಕ್ಷಾ ಸಮಯದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಪರೀಕ್ಷೆ ನಡೆದಿದೆ ಎಂದು ಡಿಡಿಪಿಯು ಶಿವಲಿಂಗ ಶೆಟ್ಟಿ ಅವರು ಮಾಹಿತಿ ನೀಡಿದ್ದಾರೆ.