ಮಾಸ್ಕ್ ಧಾರಣೆ, ವೈಯಕ್ತಿಕ ಶುಚಿತ್ವ ಕಾಪಾಡಿಕೊಳ್ಳುವುದು ಅತೀ ಮುಖ್ಯ : ಎಸ್ಪಿ ಡಾ. ಸುಮನ್ ಡಿ.ಪೆನ್ನೇಕರ್ ಸಲಹೆ

ಮಡಿಕೇರಿ ಜೂ.18 : ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವುದು ಅತೀ ಮುಖ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ಡಿಎಚ್‍ಒ ಕಚೇರಿಯಿಂದ ಗುರುವಾರ ಮಾಸ್ಕ್ ದಿನಾಚರಣೆಯ ಪ್ರಯುಕ್ತ ಏರ್ಪಡಿಸಿದ್ದ ಜಾಗೃತಿ ಜಾಥಗೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯಾದ್ಯಂತ ಇಂದು ಮುಖಗವಸು(ಮಾಸ್ಕ್ ಡೇ) ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಕೋವಿಡ್-19 ಸೋಂಕಿನ ವಿರುದ್ಧದ ಹೋರಾಟದಲ್ಲಿ ನಾಗರಿಕರ ಸಹಕಾರ ಅತಿಮುಖ್ಯ. ಕೊರೋನಾ ವೈರಸ್‍ನಿಂದ ರಕ್ಷಿಸಿಕೊಳ್ಳಲು ಮತ್ತು ಇತರರನ್ನು ರಕ್ಷಿಸಲು ಮಾಸ್ಕ್ ಧರಿಸಬೇಕಿದೆ ಎಂದು ಅವರು ತಿಳಿಸಿದರು.
ಜಾಥಾವು ಡಿಎಚ್‍ಒ ಕಚೇರಿಯಿಂದ ಆರಂಭಿಸಿ ಜನರಲ್ ತಿಮ್ಮಯ್ಯ ವೃತ್ತ, ಮಂಗೇರಿರ ಮುತ್ತಣ್ಣ ವೃತ್ತ, ನಗರಸಭೆ ಮಾರ್ಗವಾಗಿ ಸಂಚರಿಸಿ ಸಾರ್ವಜನಿಕರಿಗೆ ಮಾಸ್ಕ್ ದಾರಣೆಯ ಬಗ್ಗೆ ಮಾಹಿತಿ ನೀಡಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ಮಾತನಾಡಿ, ಕೊರೊನಾ ವೈರಸ್ ಹರಡದಂತೆ ತಡೆಗಟ್ಟಲು ವೈಯಕ್ತಿಕ ಶುಚಿತ್ವ ಅತೀ ಮುಖ್ಯ. ಮಾಸ್ಕ್ ಧರಿಸುವುದರೊಂದಿಗೆ ಸಾಬೂನು, ಹ್ಯಾಂಡ್ ವಾಶ್ ಬಳಸಿ ಕೈಗಳನ್ನು ತೊಳೆಯಬೇಕು. ಪದೇ ಪದೇ ಕಣ್ಣು, ಮೂಗು ಮತ್ತು ಬಾಯಿಯನ್ನು ಮುಟ್ಟಬಾರದು. ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಬಹುಮುಖ್ಯ ಎಂದು ಅವರು ತಿಳಿಸಿದರು.
ಜಾಥಾದಲ್ಲಿ ಡಿವೈಎಸ್‍ಪಿ ದಿನೇಶ್ ಕುಮಾರ್, ತಹಶೀಲ್ದಾರ್ ಮಹೇಶ್, ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಿವಕುಮಾರ್, ಆರ್‍ಸಿಎಚ್ ಅಧಿಕಾರಿ ಡಾ.ಗೋಪಿನಾಥ್, ಸಮುದಾಯ ಆರೋಗ್ಯ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಮಹೇಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್, ಇತರರು ಇದ್ದರು.
