ಕೊಡಗಿನಲ್ಲಿ ಭೂಕುಸಿತ ತಡೆಗಟ್ಟಲು ಕ್ರಮ : ಸರ್ಕಾರಕ್ಕೆ ವರದಿ

20/06/2020

ಮಡಿಕೇರಿ ಜೂ.20 : ಕಳೆದ ಎರಡು ವರ್ಷಗಳಲ್ಲಿ ಭೂ ಕುಸಿತ ಉಂಟಾಗಿರುವ ಪ್ರದೇಶಗಳಿಗೆ ಭೇಟಿ ನೀಡಲಾಗಿದ್ದು, ಭೂಕುಸಿತ ತಡೆಗಟ್ಟಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಾಗುವುದು ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿಯ ಅಧ್ಯಕ್ಷರು ಹಾಗೂ ಮಲೆನಾಡಿನ ಭೂಕುಸಿತ ಅಧ್ಯಯನ ಸಮಿತಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅವರು ತಿಳಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭೂ ಕುಸಿತವನ್ನು ತಡೆಗಟ್ಟುವ ನಿಟ್ಟಿನಲ್ಲಿ ವೈಜ್ಞಾನಿಕವಾಗಿ ವಿಶ್ಲೇಷಣೆ ಮಾಡಿ ಪರಿಹಾರ ಕಂಡು ಕೊಳ್ಳಲು ಮೂರು ತಿಂಗಳಲ್ಲಿ ವರದಿ ನೀಡಲು ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಜನರ ರಕ್ಷಣೆ, ಪರಿಸರ ಸಂರಕ್ಷಣೆ ಎರಡು ಅತೀ ಮುಖ್ಯ ಅಂಶವಾಗಿದ್ದು, ಪೂರ್ವ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಸಭೆಯಲ್ಲಿ ತಾಂತ್ರಿಕ ಮಾಹಿತಿಯೊಂದಿಗೆ ಚರ್ಚೆ ನಡೆಸಲಾಗಿದೆ. ಈ ವರದಿಯನ್ನು ಸರ್ಕಾರಕ್ಕೆ ನೀಡಲಿದ್ದೇವೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಲೆನಾಡಿನ ಭೂಕುಸಿತ ಅಧ್ಯಯನ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ, ಸಿಸಿಎಫ್ ಹೀರಾಲಾಲ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಡಿಸಿಎಫ್‍ಗಳಾದ ಪ್ರಭಾಕರನ್ ಮತ್ತಿತರರು ಹಾಜರಿದ್ದರು.