ರೆಸಾರ್ಟ್ ಮತ್ತು ಹೋಂಸ್ಟೇಗಳಿಗೆ ಮತ್ತೆ ಬೀಗ : ಮುನ್ಸೂಚನೆ ನೀಡಿದ ಶಾಸಕ ಅಪ್ಪಚ್ಚುರಂಜನ್

22/06/2020

ಮಡಿಕೇರಿ ಜೂ.22 : ಕೊಡಗಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿರುವುದರಿಂದ ಜಿಲ್ಲೆಯ ಎಲ್ಲಾ ರೆಸಾರ್ಟ್ ಮತ್ತು ಹೋಂಸ್ಟೇಗಳನ್ನು ಮತ್ತೆ ಬಂದ್ ಮಾಡುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ತಿಳಿಸಿದ್ದಾರೆ.
ಸೋಮವಾರಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮತ್ತೆ ಇಬ್ಬರಲ್ಲಿ ಕೊರೋನಾ ಸೋಂಕು ದೃಢ ಪಟ್ಟಿದ್ದು, ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದರು. ವಿವಿಧೆಡೆಯಿಂದ ಪ್ರವಾಸಿಗರು ಬಂದು ಜಿಲ್ಲೆಯಲ್ಲಿ ತಂಗುತ್ತಿರುವ ಬಗ್ಗೆ ಮಾಹಿತಿ ಇದೆ. ಈ ಕಾರಣದಿಂದ ಮತ್ತೆ ರೆಸಾರ್ಟ್ ಮತ್ತು ಹೋಂಸ್ಟೇಗಳನ್ನು ಬಂದ್ ಮಾಡುವ ಅನಿವಾರ್ಯತೆ ಇದೆ ಎಂದರು.
::: ಆತಂಕ ಸೃಷ್ಟಿ :::
ಎರಡು ವಾರಗಳ ಹಿಂದೆ ರೆಸಾರ್ಟ್ ಮತ್ತು ಹೋಂಸ್ಟೇಗಳನ್ನು ತೆರೆಯಲು ಅನುಮತಿ ನೀಡಲಾಗಿತ್ತು. ಪ್ರವಾಸಿಗರು ಕೂಡ ಕೊಡಗಿನ ಕಡೆ ಬರಲು ಆರಂಭಿಸಿದ್ದರು. ಆದರೆ ಇದೀಗ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಆತಂಕ ಸೃಷ್ಟಿಯಾಗಿದೆ.