ಮಳೆಗಾಲವನ್ನು ಸಮರ್ಥವಾಗಿ ನಿರ್ವಹಿಸಿ : ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ

22/06/2020

ಮಡಿಕೇರಿ ಜೂ.22: ಮಳೆಗಾಲವನ್ನು ಸಮರ್ಥವಾಗಿ ನಿರ್ವಹಿಸುವಲ್ಲಿ ಜಿಲ್ಲಾಡಳಿತ ಸನ್ನದ್ಧವಾಗಿರಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬು ಕುಮಾರ್ ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಮಳೆ ಹಾಗೂ ಮಳೆಯಿಂದಾಗುವ ಹಾನಿಯ ಸಂಬಂಧ ಮುಂಜಾಗ್ರತ ಕ್ರಮದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಮುಂದೆ ಎದುರಾಗಬಹುದಾದ ಮಳೆ ಹಾನಿ ಸಂಬಂಧ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಕೊರೊನಾ ಸೋಂಕು ಇರುವ ಈ ಸನ್ನಿವೇಶದಲ್ಲಿ ಮಳೆಯಿಂದ ಹೆಚ್ಚಿನ ಹಾನಿ ಸಂಭವಿಸಿದ ಸಂದರ್ಭದಲ್ಲಿ ಮಾಡಬೇಕಾದ ಕಾರ್ಯ ಚಟುವಟಿಕೆಗಳನ್ನು ಪೂರ್ಣಗೊಳಿಸಿಕೊಂಡು ಪರಿಹಾರ ಕೇಂದ್ರಗಳ ಸೌಕರ್ಯಗಳು, ಜೀವ ರಕ್ಷಾ ಸಾಧನಗಳ ಬಳಕೆಯ ಬಗ್ಗೆ ಅಗತ್ಯವಿರುವ ತರಬೇತಿಯನ್ನು ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಹೀಗೆ ತುರ್ತು ಸಂದರ್ಭದಲ್ಲಿ ಕಾರ್ಯನಿರ್ವಹಿಸುವ ತಂಡಗಳಿಗೆ ತರಬೇತಿ ನೀಡಿ ತಂಡಗಳನ್ನು ಸನ್ನದ್ಧವಾಗಿಟ್ಟುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಇರುವ ಹಾರಂಗಿ ಜಲಾಶಯದ ನೀರಿನ ಒಳಹರಿವಿನ ಬಗ್ಗೆ ಕಾಲ ಕಾಲಕ್ಕೆ ಮಾಹಿತಿ ಪಡೆದು ಹೆಚ್ಚಿನ ಒಳಹರಿವು ಕಂಡು ಬಂದ ಸಂದರ್ಭದಲ್ಲಿ ಜಲಾಶಯದ ಮತ್ತು ಸಾರ್ವಜನಿಕರ ಸುರಕ್ಷತಾ ದೃಷ್ಟಿಯಿಂದ ನೀರನ್ನು ಹರಿಸಲು ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಅವರಿಗೆ ತಿಳಿಸಿದರು.
ಕೋವಿಡ್-19 ತಡೆಗಟ್ಟುವುದರೊಂದಿಗೆ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗದಂತೆ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸೂಚನೆ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ ಅವರು ಮಾತನಾಡಿ ಈಗಾಗಲೇ ಮಳೆಗಾಲವನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜೂನ್ ಮೊದಲ ವಾರದಲ್ಲಿಯೇ ಎನ್‍ಡಿಆರ್‍ಎಫ್ ತಂಡ ಜಿಲ್ಲೆಗೆ ಆಗಮಿಸಿದೆ. ಅವಶ್ಯವಿರುವ ಪರಿಕರಗಳನ್ನು ಈಗಾಗಲೇ ಖರೀದಿಸಲಾಗಿದೆ ಎಂದು ಅವರು ತಿಳಿಸಿದರು.
ಕಳೆದ ಸಾಲಿನ ಅತಿವೃಷ್ಟಿಯಿಂದ ತೊಂದರೆಗೊಳಗಾದ ಕುಟುಂಬಗಳಿಗೆ ಪರಿಹಾರ ವಿತರಣೆ ಮಾಡಿರುವ ಮಾಹಿತಿ, ಬೆಳೆ ಹಾನಿ ಪರಿಹಾರ ವಿತರಣೆ ಹಾಗೂ ಅತಿವೃಷ್ಟಿಯಿಂದ ಹಾನಿಗೊಳಗಾದ ಕಾಮಗಾರಿಗಳ ಪ್ರಗತಿ ಮಾಹಿತಿಯನ್ನು ಸಭೆಗೆ ನೀಡಿದರು.
ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಡಿ.ಪಿ.ಸುಮನ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಇ ಪ್ರಭು, ಭೂ ದಾಖಲೆಗಳ ಉಪ ನಿರ್ದೇಶಕರಾದ ಶ್ರೀನಿವಾಸ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಕಾರ್ಯಪ್ಪ, ಇತರರು ಇದ್ದರು.