ಕೊರೋನಾ ನಿಯಂತ್ರಿಸಲು ಸಿಎಂ ಸೂಚನೆ

June 23, 2020

ಬೆಂಗಳೂರು ಜೂ.23 : ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಚಿವ ಸಂಪುಟ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ಮಾತನಾಡಿ ಯಡಿಯೂರಪ್ಪ, ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಹದಿನೈದು ದಿನಗಳಲ್ಲಿ ಅತಿ ಹೆಚ್ಚು ಮುನ್ನೆಚ್ಚರಿಕೆಯ ಕ್ರಮಗಳನ್ನು ವಹಿಸಿದರೆ ಮಾತ್ರ, ಸೋಂಕು ಹರಡುವ ಪ್ರಮಾಣವನ್ನು ನಿಯಂತ್ರಿಸಲು ಸಾಧ್ಯ. ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಶ್ರಮವಹಿಸಬೇಕೆಂದು ಆದೇಶಿಸಿದರು.
ಬೆಂಗಳೂರು ನಗರದಲ್ಲಿ ಹಾಗೂ ಇತರ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗಿರುವ ಪ್ರದೇಶಗಳಲ್ಲಿ ಲಾಕ್ ಡೌನ್ ಪ್ರಕ್ರಿಯೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕು. ಕ್ವಾರಂಟೈನ್ ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು. ಅಗತ್ಯ ಬಿದ್ದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಸೂಚಿಸಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ದರ ನಿಗದಿ ಮಾಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವ ಪ್ರಕರಣಗಳಲ್ಲಿ ಸೋಂಕಿತರಿಗೆ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಯಿತು. ಸಾಂಸ್ಥಿಕ ಕ್ವಾರಂಟೈನ್ ಗೆ ಒಳಗಾಗಿ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳು ಮತ್ತಿತರ ಸರ್ಕಾರಿ ಸಂಸ್ಥೆಗಳಲ್ಲಿ ಇರುವವರಿಗೆ ಅಗತ್ಯ ಮೂಲಸೌಕರ್ಯ ಒದಗಿಸುವಂತೆ ಮುಖ್ಯಮಂತ್ರಿ ನಿರ್ದೇಶನ ನೀಡಿದರು.

error: Content is protected !!