ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಮುಂದೂಡಲು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆಗ್ರಹ

23/06/2020

ಮಡಿಕೇರಿ ಜೂ.23 : ಜೂ. 25 ಕ್ಕೆ ನಿಗದಿಯಾಗಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಕೊರೋನಾ ಪಾಸಿಟಿವ್ ಪ್ರಕರಣಗಳು ಇಳಿಮುಖವಾಗುವವರೆಗೂ ಮುಂದೂಡುವಂತೆ ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದ ರಾಜ್ಯ ಸಮಿತಿ ಜಿಲ್ಲಾಧಿಕಾರಿಗಳಿಗೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಎಸ್.ಮಚ್ಚಾಡೊ ಅವರಿಗೆ ಮನವಿ ಪತ್ರ ಸಲ್ಲಿಸಿದೆ.
ಈ ಸಂದರ್ಭ ಮಾತನಾಡಿದ ರಾಜ್ಯಾಧ್ಯಕ್ಷ ಫಯಾಝ್ ದೊಡ್ಡಮನೆ, ರಾಜ್ಯದಲ್ಲಿ ಕೊರೋನಾ ವೈರಸ್ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ಲಾಕ್‍ಡೌನ್‍ನ ನಂತರ ಜನರು ಸಹಜ ಸ್ಥಿತಿಗೆ ಮರಳಲು ಹಿಂದೇಟು ಹಾಕುತ್ತಿದ್ದಾರೆ. ಸರಕಾರವು ಕೂಡಾ ಜನರಿಗೆ ಸ್ಪಷ್ಟ ನಿರ್ದೇಶನವನ್ನು ನೀಡುತ್ತಿಲ್ಲ. ಇನ್ನೊಂದೆಡೆ ಜನರು ದೈಹಿಕ ಅಂತರವನ್ನು ಕಾಪಾಡಿಕೊಳ್ಳಲು ವಿಫಲವಾಗುತ್ತಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ ಎಂದರು.
ರಾಜ್ಯದಲ್ಲಿ ಈ ವರ್ಷ ಒಟ್ಟು 8.48 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಎಲ್ಲರೂ ಕೊರೋನಾ ಭೀತಿಯನ್ನು ಎದುರಿಸುತ್ತಿದ್ದಾರೆ. ಕೊರೋನಾ ಮುಂಜಾಗೃತ ಕ್ರಮವಾಗಿ ಕೇಂದ್ರ ಸರಕಾರವು ಆರಂಭದಿಂದಲೇ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಮುಂದಿನ ಆದೇಶದವರೆಗೆ ತರಗತಿ ಆರಂಭಿಸುವಂತಿಲ್ಲ ಎಂದು ಸೂಚಿಸಿದೆ. ಇಂತಹ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಜೂನ್ 25 ರಿಂದ ಜುಲೈ 4 ರವರೆಗೆ ನಡೆಸಲು ರಾಜ್ಯ ಸರಕಾರ ನಿರ್ಧರಿಸಿರುವುದನ್ನು ಸರಕಾರ ಮರು ಪರಿಶೀಲಿಸಬೇಕೆಂದು ಮನವಿ ಮಾಡಿದರು.
ವಿದ್ಯಾರ್ಥಿಗಳಿಗೆ ಕೊರೋನಾ ವೈರಸ್ ಹರಡದಂತೆ ಮುಂಜಾಗೃತಾ ಕ್ರಮಗಳನ್ನು ಇಲ್ಲಿಯವರೆಗೆ ಪೆÇೀಷಕರು ಕೈಗೊಂಡಿದ್ದಾರೆ. ಅಲ್ಲದೇ ಈ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸದೇ ಮನೆಯಲ್ಲೇ ಇರಿಸುವ ಬಗ್ಗೆ ಹಲವು ಪೆÇೀಷಕರು ಈಗಾಗಲೇ ನಿರ್ಧಾರ ತೆಗೆದುಕೊಂಡಿದ್ದಾರೆ. ಇಂತಹ ಗೊಂದಲಮಯ ವಾತಾವರಣದಲ್ಲಿ ಸರಕಾರ ವಿದ್ಯಾರ್ಥಿಗಳ ಪೆÇೀಷಕರಿಗೆ ಸೂಕ್ತ ಮಾರ್ಗದರ್ಶನವನ್ನು ನೀಡಬೇಕಾಗಿದೆ ಎಂದು ಫಯಾಝ್ ದೊಡ್ಡಮನೆ ಮನವಿ ಮಾಡಿದರು.
ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ವಿವಿಧ ಪ್ರದೇಶಗಳಿಂದ ಹಾಗೂ ಅಂತರಾಜ್ಯದ ವಿದ್ಯಾರ್ಥಿಗಳು ಕೂಡಾ ಪರೀಕ್ಷೆ ಬರೆಯಲು ಬರಲಿರುವ ಕಾರಣ ದೈಹಿಕ ಅಂತರ ಮತ್ತು ಸುರಕ್ಷತೆಯ ಕಡೆಗೆ ಗಮನಹರಿಸುವುದು ಸಾಧ್ಯವಿಲ್ಲ. ಇತ್ತೀಚೆಗೆ ನಡೆದ ದ್ವಿತೀಯ ಪಿ.ಯು.ಸಿ ಇಂಗ್ಲಿಷ್ ಪರೀಕ್ಷೆಗೆ ರಾಜ್ಯದಲ್ಲಿ ಸುಮಾರು 27000 ವಿದ್ಯಾರ್ಥಿಗಳು ಕೊರೋನಾ ವೈರಸ್‍ಗೆ ಹೆದರಿ ಗೈರಾಗಿದ್ದಾರೆ ಎಂದು ವರದಿಯಾಗಿತ್ತು. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಕಾಪಾಡುವ ನಿಟ್ಟಿನಲ್ಲಿ ಜೂನ್ 25ಕ್ಕೆ ನಿಗದಿಯಾಗಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಶೀಘ್ರ ಮುಂದೂಡಿಸಿ ಆದೇಶ ಹೊರಡಿಸಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಸಮಿತಿ ರಾಜ್ಯ ಸರಕಾರವನ್ನು ಒತ್ತಾಯಿಸಿದರು.

ಬೇಡಿಕೆಗಳು :
ಪರೀಕ್ಷಾ ಸಂಬಂಧಿ ವಿಚಾರಗಳಲ್ಲಿ ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಸಚಿವಾಲಯ ಮಧ್ಯಪ್ರವೇಶಿಸಿ, ಏಕರೂಪ ತೀರ್ಮಾನ ಕೈಗೊಳ್ಳಬೇಕು, ಎಸ್.ಎಸ್.ಎಲ್.ಸಿ ಪರೀಕ್ಷೆಗೆ ನೋಂದಾವಣೆ ಮಾಡಿದಂತಹ 8.48 ಲಕ್ಷ ವಿದ್ಯಾರ್ಥಿಗಳ ಆರೋಗ್ಯ ಹಿತದೃಷ್ಟಿಯಿಂದ ಪರೀಕ್ಷೆ ಆರಂಭವಾಗುವವರೆಗೂ ವಿದ್ಯಾರ್ಥಿಗಳ ಮೇಲೆ ವಿಶೇಷ ಕಾಳಜಿ ವಹಿಸಬೇಕು, ಪರೀಕ್ಷೆಗೆ ಸಿದ್ಧರಾಗಿರುವ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿಕೆಯಿಂದ ಖಿನ್ನತೆಗೆ ಒಳಗಾಗುವ ಸಾಧ್ಯತೆ ಇದ್ದು, ಅವರಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಶೀಘ್ರದಲ್ಲಿಯೇ ವೈಯಕ್ತಿಕ ಕೌನ್ಸಿಲಿಂಗ್‍ಗಳನ್ನು ನಡೆಸಲು ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.