ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ : ಬೆಲೆ ಏರಿಕೆಗೆ ಖಂಡನೆ

29/06/2020

ಕೊಡಗಿನಲ್ಲಿ ಜೂ.29 : ಪೆಟ್ರೋಲ್, ಡೀಸೆಲ್ ಮತ್ತು ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು.
ಸೈಕಲ್ ಗಳ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಕಾಂಗ್ರೆಸ್ ಪ್ರಮಖರು ಹಾಗೂ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬರುವ ಸಂದರ್ಭ ಜನಸಾಮಾನ್ಯರ ಪರವಾಗಿ ಕೆಲಸ ಮಾಡುವುದಾಗಿ ಹೇಳಿಕೊಂಡಿತ್ತು. ಆದರೆ ಅಧಿಕಾರಕ್ಕೆ ಬಂದ ನಂತರ ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದರು.
ಆರ್ಥಿಕ ಕ್ಷೇತ್ರದಲ್ಲಿ ವೈಫಲ್ಯವನ್ನು ಕಂಡಿರುವ ಬಿಜೆಪಿ ನೇತೃತ್ವದ ಸರ್ಕಾರ ಖಜಾನೆಯನ್ನು ಭರ್ತಿ ಮಾಡಿಕೊಳ್ಳಲು ಜನಸಾಮಾನ್ಯರ ಮೇಲೆ ದುಬಾರಿ ದರದ ಹೊರೆಯನ್ನು ಹೊರಿಸುತ್ತಿದೆ. ಕೊರೋನಾ ಸಂಕಷ್ಟದ ನಡುವೆಯೇ ಬೆಲೆ ಏರಿಕೆ ನಿರಂತರವಾಗಿರುವುದರಿಂದ ಬಡವರು ಕಣ್ಣೀರಿನಲ್ಲಿ ದಿನ ಕಳೆಯುವಂತ್ತಾಗಿದೆ. ಕಾನೂನುಗಳನ್ನು ಏಕಪಕ್ಷೀಯವಾಗಿ ತಿದ್ದುಪಡಿ ಮಾಡುವ ಮೂಲಕ ಜನರನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳುವ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಟೀಕಿಸಿದರು.
ಹಸಿದ ಹೊಟ್ಟೆಗೆ ಅನ್ನ ನೀಡುವ ವ್ಯವಸ್ಥೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರು ಜಾರಿಗೆ ತಂದರು. ಆದರೆ ಇಂದಿನ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪಡಿತರ ಧಾನ್ಯಗಳ ಪ್ರಮಾಣವನ್ನು ಕಡಿತಗೊಳಿಸುವ ಮೂಲಕ ಬಡವರನ್ನು ಹಸಿವಿನಿಂದ ನರಳುವಂತೆ ಮಾಡಿದೆ ಎಂದು ವೀಣಾಅಚ್ಚಯ್ಯ ದೂರಿದರು.
ರೈತ ವಿರೋಧಿ ಕಾಯ್ದೆಯನ್ನು ಜಾರಿಗೆ ತಂದಿರುವ ಸರ್ಕಾರ ನೈಜ ಕೃಷಿಕನ ಭೂಮಿಯನ್ನು ಬಂಡವಾಳಶಾಹಿಗಳ ಪಾಲಾಗುವಂತೆ ತಂತ್ರ ರೂಪಿಸಿದೆ ಎಂದು ಆರೋಪಿಸಿದರು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಜನವಿರೋಧಿ ನೀತಿಗಳ ವಿರುದ್ಧ ಹೋರಾಟವನ್ನು ತೀವ್ರಗೊಳಿಸಲಿದೆ ಎಂದು ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ, ಕಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ರಾಜ್ಯ ಸರ್ಕಾರ ಸುಗ್ರಿವಾಜ್ಞೆಯ ಮೂಲಕ ಭೂ ಸುಧಾರಣೆ ಕಾಯ್ದೆಯನ್ನು ಜಾರಿಗೆ ತಂದು ಬಡ ರೈತರ ಜಮೀನನ್ನು ಕಸಿದುಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ಟೀಕಿಸಿದರು.
ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲದ ಬೆಲೆ ಇಳಿಕೆಯಾಗಿದ್ದರೂ, ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಮಾಡುತ್ತಲೇ ಇದ್ದು, ಈ ಸರ್ಕಾರಕ್ಕೆ ಬಡವರ ನೋವೇ ತಿಳಿದಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ನೆರವಂಡ ಉಮೇಶ್ ಮಾತನಾಡಿ, ಉಳುವವನೇ ಭೂಮಿಯ ಒಡೆಯ ಎಂಬ ಕಾನೂನನ್ನು ತರಲಾಗಿತ್ತು. ಇದು ಬಡಜನರಿಗೆ ಸಮಾಜದಲ್ಲಿ ಉನ್ನತ ಸ್ಥಾನಮಾನವನ್ನು ದೊರಕಿಸಿತ್ತು. ಆದರೆ ಇಂದು ಪ್ರಗತಿಪರ ಭೂ ಸುಧಾರಣೆ ಕಾಯ್ದೆಯನ್ನು ತಿದ್ದುಪಡಿ ಮಾಡಿ ಕಪ್ಪು ಹಣದ ಚಲಾವಣೆಗೆ ದಾರಿ ಮಾಡಿಕೊಡಲಾಗಿದೆ ಎಂದು ಆರೋಪಿಸಿದರು.
ಶಾಸಕ ಕೆ.ಜಿ.ಬೋಪಯ್ಯ ಅವರು ಈ ಹಿಂದೆ ಕಾರ್ಯಕ್ರಮಗಳಲ್ಲಿ ತಮ್ಮ ನೆಲವನ್ನು ಮಾರಿಕೊಳ್ಳದಂತೆ ಜನರಿಗೆ ಸಲಹೆ ನೀಡುತ್ತಿದ್ದರು. ಆದರೆ ಕೃಷಿಭೂಮಿ ಸುಲಭವಾಗಿ ಮಾರಾಟವಾಗುವ ರೀತಿಯಲ್ಲಿ ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆಯನ್ನು ತಿದ್ದುಪಡಿ ಮಾಡಿದ ನಂತರ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಐಎನ್‍ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಮಾತನಾಡಿ, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜನಸಮಾನ್ಯರು ಆರ್ಥಿಕ ಸಂಕಷ್ಟದಲ್ಲಿ ಆತಂಕ ಎದುರಿಸುತ್ತಿದ್ದಾರೆ. ರೈತರು ತಮ್ಮ ಬೆಳೆಗೆ ಉತ್ತಮ ಮಾರುಕಟ್ಟೆ ದೊರಕದೆ ಕಂಗಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರೈತರ ಜಮೀನನ್ನು ಯಾರು ಬೇಕಾದರು ಕೊಂಡುಕೊಳ್ಳಲು ಅವಕಾಶ ಕಲ್ಪಿಸಿರುವುದು ಸರಿಯಾದ ಕ್ರಮವಲ್ಲವೆಂದರು.
ಪ್ರತಿಭಟನೆಯಲ್ಲಿ ಕೆಪಿಸಿಸಿ ಉಸ್ತುವಾರಿಗಳಾದ ಟಿ.ಎಂ.ಶಾಹಿದ್, ವೆಂಕಪ್ಪ ಗೌಡ, ಪ್ರಮುಖರಾದ ಕೆ.ಪಿ.ಚಂದ್ರಕಲಾ, ಮಿಟ್ಟು ಚಂಗಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಯೋಜಕ ತೆನ್ನಿರಾ ಮೈನಾ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಹೊಸೂರು ಸೂರಜ್, ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್, ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಸಾಮಾಜಿಕ ಜಾಲತಾಣದ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ನಗರ ಮಹಿಳಾ ಘಟಕದ ಅಧ್ಯಕ್ಷೆ ಹೊಟ್ಟೆಯಂಡ ಪಾರ್ವತಿ ಫ್ಯಾನ್ಸಿ, ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಕೆ.ಎ.ಯಾಕುಬ್, ವಕ್ತಾರ ಟಿ.ಇ.ಸುರೇಶ್, ರಾಹುಲ್ ಬ್ರಿಗೇಡ್‍ನ ಅಧ್ಯಕ್ಷ ಚುಮ್ಮಿದೇವಯ್ಯ, ಯುವ ಘಟಕದ ಅಧ್ಯಕ್ಷ ಮುದ್ದಪ್ಪ, ಕಿಸಾನ್ ಘಟಕದ ಜಿಲ್ಲಾ ಉಪಾಧ್ಯಕ್ಷ ಸನ್ನಿ ಕುಶಾಲಪ್ಪ, ಮೂಳೇರ ಕುಶಾಲಪ್ಪ, ತೀರ್ಥಪ್ರಸಾದ್, ಶೌಕತ್ ಆಲಿ, ಮೊಯಿದು, ಡಿಸಿಸಿ ಸದಸ್ಯರಾದ ಪುಷ್ಪ ಪೂಣಚ್ಚ, ಜಿ.ಪಂ. ಮಾಜಿ ಸದಸ್ಯ ಮೊಯ್ದು ಕೊಯನಾಡು, ಹನೀಫ್ ಸಂಪಾಜೆ ಹಾಗೂ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.