ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಅಸಮಾಧಾನ

June 30, 2020

ನವದೆಹಲಿ ಜೂ.30 : ದೇಶದಲ್ಲಿ ಲಾಕ್ ಡೌನ್ ಜಾರಿಗೊಳಿಸಿದ ನಂತರ 22 ಬಾರಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಇಂಧನ ದರ ಏರಿಕೆ ಮೂಲಕ ಸರ್ಕಾರ ಜನರ ಸುಲಿಗೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, `ಇಂಧನ ದರ ಏರಿಕೆ ವಿರುದ್ಧ ದನಿಯೆತ್ತಿ’ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಸೋನಿಯಾ, ಬೆಲೆ ಏರಿಕೆ ನಿರ್ಧಾರವನ್ನು ಸರ್ಕಾರ ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಜನರ ವೆಚ್ಚದ ಮೂಲಕ ಸರ್ಕಾರ ಲಾಭ ಗಳಿಸಲು ಹೊರಟಿದೆ. ಇಂಥ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರವು ಜನರಿಗೆ ನೆರವಾಗುವುದು ಬಿಟ್ಟು ಅವರು ಕಷ್ಟಪಟ್ಟು ಸಂಪಾದಿಸಿದ ಹಣದಿಂದ ಲಾಭ ಮಾಡುವುದು ಸರಿಯಲ್ಲ ಎಂದಿದ್ದಾರೆ.
ಒಂದೆಡೆ ಕೊರೊನಾ ವೈರಸ್ ಸಾಂಕ್ರಾಮಿಕದಿಂದ ಜನ ಸಂಕಷ್ಟಕ್ಕೆ ಸಿಲುಕಿರುವಾಗಲೇ ಪೆಟ್ರೋಲ್, ಡೀಸೆಲ್ ದರ ಏರಿಕೆ ಜೀವನವನ್ನು ಮತ್ತಷ್ಟು ಕಷ್ಟಕರವಾಗಿಸಿದೆ ಎಂದು ಹೇಳಿದ್ದಾರೆ.