ಹಾಡಿ ನಿವಾಸಿಗಳಿಗೆ ಆಹಾರ ಒದಗಿಸಲು ಸಂಸದ ಪ್ರತಾಪ್ ಸಿಂಹ ಸೂಚನೆ

30/06/2020

ಮಡಿಕೇರಿ ಜೂ.30 : ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯಡಿಯಲ್ಲಿ ಸರ್ಕಾರ ಹಾಡಿಗಳಲ್ಲಿನ ನಿವಾಸಿಗಳಿಗೆ ಉತ್ತಮ ಗುಣಮಟ್ಟದ ಆಹಾರ ನೀಡುತ್ತಿದೆ. ಇದು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಎಚ್ಚರ ವಹಿಸಬೇಕು ಎಂದು ಸಂಸದÀ ಪ್ರತಾಪ್ ಸಿಂಹ ಅವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದ ಜಿ.ಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಾಡಿಗಳಲ್ಲಿರುವವರಿಗೆ ಸಮರ್ಪಕವಾಗಿ ಆಹಾರ ನೀಡುವ ಕಾರ್ಯವಾಗಬೇಕು. ಆಹಾರ ಪದಾರ್ಥ ವಿತರಣಾ ಸಂದರ್ಭ ಸ್ಥಳೀಯ ಜನಪ್ರತಿನಿಧಿಗಳನ್ನು ಆಹ್ವಾನಿಸಿ ಪಾರದರ್ಶಕವಾಗಿ ಆಹಾರ ಪದಾರ್ಥ ವಿತರಿಸಿ. ಯಾವುದೇ ಹಾಡಿಗಳಲ್ಲಿ ಸಮರ್ಪಕ ಆಹಾರ ಪೂರೈಕೆಯಾಗಿಲ್ಲ ಎಂಬ ದೂರುಗಳು ಬಂದಲ್ಲಿ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಶಿವಕುಮಾರ್ ಅವರಿಗೆ ಸಂಸದ ಪ್ರತಾಪ್ ಸಿಂಹ ಅವರು ಸೂಚನೆ ನೀಡಿದರು.
ತಿತಿಮತಿ ಬಳಿಯ ಹಾಡಿಯಲ್ಲಿ ಸಮರ್ಪಕವಾಗಿ ಆಹಾರ ಪೂರೈಕೆಯಾಗುತ್ತಿಲ್ಲ ಎಂದು ಅಲ್ಲಿನ ಸ್ಥಳೀಯ ಜನಪ್ರತಿನಿಧಿಗಳು ಮತ್ತು ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ ಅವರು ಹೇಳಿದರು. ಈ ಬಗ್ಗೆ ಕೂಡಲೇ ಕ್ರಮ ವಹಿಸಬೇಕು ಎಂದು ಅವರು ಹೇಳಿದರು.
ಈ ಬಗ್ಗೆ ಶೀಘ್ರವೇ ಸಂಬಂಧಪಟ್ಟ ಹಾಡಿಗೆ ಭೇಟಿ ನೀಡಿ ಪರಿಸೀಲಿಸಿ. ಹಾಡಿಗಳಿಗೆ ನೀಡುವ ಆಹಾರ ಪೂರೈಕೆಯಲ್ಲಿ ಯಾವುದೇ ವ್ಯತ್ಯಾಸಗಳಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಸಂಸದರಾದ ಪ್ರತಾಪ್ ಸಿಂಹ ಅವರು ತಿಳಿಸಿದರು.
ಮಡಿಕೇರಿ ಶಾಸಕರಾದ ಎಂ.ಪಿ ಅಪ್ಪಚ್ಚು ರಂಜನ್ ಅವರು ಮಾತನಾಡಿ, ಬಜೆಗುಂಡಿ, ವಾಲ್ನೂರು ಮತ್ತು ತ್ಯಾಗತ್ತೂರು ಸೇರಿದಂತೆ ಇನ್ನೂ ಹಲವು ಹಾಡಿಗಳಲ್ಲಿ ವಾಸಿಸುತ್ತಿರುವ ಅರಣ್ಯದಲ್ಲಿನ ಪರಿಶಿಷ್ಟ ಪಂಗಡದ ಜನರಿಗೆ ಹಕ್ಕು ಪತ್ರ ನೀಡುವ ಕಾರ್ಯ ಮಾಡಬೇಕು. ಅಲ್ಲದೆ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯ ಸಮನ್ವಯತೆಯಲ್ಲಿ ಗ್ರಾಮ ಸಭೆಗಳನ್ನು ನಡೆಸಿ. ಗ್ರಾಮ ಸಭೆಯ ಮೂಲಕ ಹಾಡಿಗಳಲ್ಲಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ಕಾರ್ಯ ಮಾಡಿ ಎಂದು ಶಾಸಕರಾದ ಅಪ್ಪಚ್ಚು ರಂಜನ್ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಈಗಾಗಲೇ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯುತ್ತಿದ್ದು ವಿದ್ಯುತ್ ಪೂರೈಕೆಯಲ್ಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗಬೇಕು ಎಂದು ಚೆಸ್ಕಾಂ ಅಧಿಕಾರಿಗಳಿಗೆ ಸಂಸದ ಪ್ರತಾಪ್ ಸಿಂಹ ಸೂಚನೆ ನೀಡಿದರು.
ಕೋವಿಡ್-19 ರಿಂದ ಮುಂದೂಡಲ್ಪಟ್ಟಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಮಳೆಗಾಲದ ಸಂದರ್ಭ ನಡೆಯುತ್ತಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ ಪರೀಕ್ಷೆಯ ಸಂದರ್ಭ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಬೇಕೆಂದರು.
ಇದೇ ವೇಳೆ ಮಾತನಾಡಿದ ಮಡಿಕೇರಿ ಕಾರ್ಯನಿರ್ವಾಹಕ ಅಭಿಯಂತರರಾದ ಸೋಮಶೇಖರ್ ಅವರು, ಪರೀಕ್ಷಾ ಸಂದರ್ಭ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಸಂಸದರಿಗೆ ಮಾಹಿತಿ ನೀಡಿದರು.
ಇದೇವೇಳೆ ಮಾತನಾಡಿದ ಸಂಸದರಾದ ಪ್ರತಾಪ್ ಸಿಂಹ ಅವರು, ಸೌಭಾಗ್ಯ ಮತ್ತು ದೀನ್ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಶೀಘ್ರವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವಾಗಬೇಕು ಎಂದು ಸಂಸದರು ತಿಳಿಸಿದರು.
ಬಾಳೆಲೆ ಭಾಗದಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಎಂದು ಸ್ಥಳೀಯ ಜನಪ್ರತಿನಿಧಿಗಳು ತಿಳಿಸಿದ್ದಾರೆ.ಆ ಭಾಗದಲ್ಲಿನ ಸಮಸ್ಯೆಯನ್ನು ಸ್ಥಳಕ್ಕೆ ಭೇಟಿ ನೀಡಿ ಕೂಡಲೇ ಪರಿಹರಿಸಿ. ಚೆಸ್ಕಾಂನ ಕಿರಿಯ ಅಭಿಯಂತರರ ಸಭೆ ಕರೆದು ಜಿಲ್ಲೆಯಲ್ಲಿನ ವಿದ್ಯುತ್ ಸಂಬಂಧ ಇರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಚೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಅವರಿಗೆ ಸಂಸದರು ತಿಳಿಸಿದರು.
ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ ಅವರು ರೈತರಿಗೆ ಟ್ರಾನ್ಸ್‍ಫಾರ್ಮರ್‍ಗಳು ಹಾಳಾದ ಸಂದರ್ಭದಲ್ಲಿ ತ್ವರಿತಗತಿಯಲ್ಲಿ ಬದಲಿಸಿಕೊಡಬೇಕು. ಯಾವುದೇ ಕಾರಣಕ್ಕೂ ವಿಳಂಬವನ್ನು ಮಾಡಬಾರದು ಎಂದು ತಾಕೀತು ಮಾಡಿದರು.
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕೆ ಪೂರಕ ಅವಕಾಶ ಕಲ್ಪಿಸಿಕೊಡಿ. 2022 ರಲ್ಲಿ ಎಲ್ಲರೂ ಸ್ವಂತ ಸೂರು ಹೊಂದಬೇಕು ಎಂಬ ಕೇಂದ್ರ ಸರ್ಕಾರದ ಆಶಯದೊಂದಿಗೆ ಈ ಕಾರ್ಯಕ್ರಮ ಜಾರಿ ಮಾಡಲಾಗಿದೆ. ಈ ನಿಟ್ಟಿನಲ್ಲಿ ಶೀಘ್ರವಾಗಿ ಅರ್ಹ ಫಲಾನುಭವಿಗಳಿಗೆ ಮನೆ ಕಟ್ಟಲು ಅಗತ್ಯ ಅವಕಾಶಗಳನ್ನು ಕಲ್ಪಿಸಿ ಎಂದು ಸಂಸದರು ಸೂಚಿಸಿದರು.
ವಸತಿ ಸಜಿವರೇ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. ಈ ನಿಟ್ಟಿನಲ್ಲಿ ಬಾಕಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡಲು ಕ್ರಮ ವಹಿಸಿ ಎಂದು ಶಾಸಕರಾದ ಅಪ್ಪಚ್ಚು ರಂಜನ್ ಅವರು ತಿಳಿಸಿದರು. ಅಲ್ಲದೆ ಬಸವ ವಸತಿ ಯೋಜನೆಗೆ ಸಂಬಂಧಿಸಿದಂತೆ ಹಲವಾರು ಬಿಲ್ಲುಗಳು ಬಾಕಿ ಇದೆ ಎನ್ನಲಾಗುತ್ತಿದೆ. ವಸತಿ ಇಲಾಖೆಯೊಂದಿಗೆ ವ್ಯವಹರಿಸಿ ಶೀಘ್ರವೇ ಬಾಕಿ ಇರುವ ಬಿಲ್ಲುಗಳ ವಿಲೇವಾರಿಗೆ ಕ್ರಮ ವಹಿಸಿ ಎಂದು ಶಾಕರಾದ ಅಪ್ಪಚ್ಚು ರಂಜನ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭ ಮಾತನಾಡಿದ ಸಂಸದ ಪ್ರತಾಪ್ ಸಿಂಹ ಅವರು, ಬಸವ ವಸತಿ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಬಾಕಿ ಇರುವ ಬಿಲ್ಲನ್ನು ಪಟ್ಟಿ ಮಾಡಿ ಶೀಘ್ರವೇ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಬಗ್ಗೆ ಮಾಹಿತಿ ನೀಡಿದ ಇಲಾಖೆಯ ಅಭಿಯಂತರರು ಸೋಮವಾರಪೇಟೆ ತಾಲೂಕಿನಲ್ಲಿ 30.19 ಕಿ.ಮೀ, ವೀರಾಜಪೇಟೆ ತಾಲೂಕಿನಲ್ಲಿ 29.24 ಕಿ.ಮೀ ಮತ್ತು ಮಡಿಕೇರಿ ತಾಲೂಕಿನಲ್ಲಿ 24.40 ಕಿ.ಮೀ ರಸ್ತೆ ಕಾಮಗಾರಿಗಳು ಮಂಜೂರಾಗಿದ್ದು ಶೀಘ್ರದಲ್ಲಿಯೇ ಕಾಮಗಾರಿಗಳು ಆರಂಭವಾಗಲಿದೆ ಎಂದು ಸಭೆಯ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಸಂಸದರು ಪಿಎಂಜಿಎಸ್‍ವೈ ಕೆಲಸಗಳನ್ನು ತುರ್ತಾಗಿ ಪೂರ್ಣಗೊಳಿಸಬೇಕು. ಹಾಗೂ ಹೊಸದಾಗಿ ಅಗತ್ಯವಿರುವ ಕಡೆಗಳಲ್ಲಿ ರಸ್ತೆ ನಿರ್ಮಾಣಕ್ಕೆ ಯೋಜನೆ ರೂಪಿಸಬೇಕು ಎಂದು ತಿಳಿಸಿದರು.
ಇದಕ್ಕೆ ಧನಿಗೂಡಿಸಿ ಮಾತನಾಡಿದ ಶಾಸಕರಾದ ಅಪ್ಪಚ್ಚು ರಂಜನ್ ಅವರು, ರಸ್ತೆ ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಂಡು ತ್ವರಿತ ಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಿದರು.
14 ನೇ ಹಣಕಾಸು ಆಯೋಗದ ಅಡಿಯಲ್ಲಿ ಜಿಲ್ಲಾ ಪಂಚಾಯತ್ ಸ್ಥಳೀಯ ಸಂಸ್ಥೆಗಳಿಗೆ 37 ಕೋಟಿ ರೂ. ಸಮರ್ಪಕವಾಗಿ ಬಳಕೆ ಮಾಡಿಕೊಂಡು ಸಂತೆ ಮಾಳ, ಸ್ಮಶಾನಗಳ ಅಭಿವೃದ್ಧಿ, ಕಸ ವಿಲೇವಾರಿ ಘಟಕಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ ಅಭಿವೃದ್ಧಿ ಕಾರ್ಯಗಳಖನ್ನು ಕೈಗೊಳ್ಳಬೇಕು ಎಂದು ತಿಳಿಸುತ್ತಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಜಿಲ್ಲೆಯಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಲಾಗಿದೆ. ಕಳೆದ ಕೆಲ ದಿನಗಳಲ್ಲಿ ಜಿಲ್ಲೆಯಲ್ಲಿ ಸೋಂಕಿತರ ಒಟ್ಟು ಸಂಖ್ಯೆ 47 ಕ್ಕೆ ಏರಿಕೆಯಾಗಿದೆ. 3 ಮಂದಿ ಈ ಪೈಕಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. 44 ಜನ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 4 ಮಂದಿಗೆ ಮಾತ್ರವೇ ರೋಗ ಲಕ್ಷಣವಿದೆ ಎಂದು ಜಿಲ್ಲಾಧಿಕಾರಿವರು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಸಂಸದರು ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಿಸುವ ಜೊತೆಗೆ ಆರೋಗ್ಯ ಕ್ಷೇತ್ರವನ್ನು ಮತ್ತಷ್ಟು ಸಶಕ್ತಗೊಳಿಸುವ ಅಗತ್ಯತೆಯಿದೆ. ದೇಶದಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆಯ ಸಂಬಂಧ ಹೆಚ್ಚುವರಿ ವೆಂಟಿಲೇಟರ್ ಅಗತ್ಯವಿದ್ದರೆ ಖರೀದಿಸಲು ಕ್ರಮ ಕೈಗೊಳ್ಳಿ ಎಂದು ಕೊಡಗು ವೈದ್ಯಕೀಯ ಕಾಲೇಜಿನ ಡೀನ್ ಡಾ.ಕಾರ್ಯಪ್ಪ ಅವರಿಗೆ ತಿಳಿಸಿದರು. ಅಲ್ಲದೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಎನ್‍ಡಿಆರ್‍ಎಫ್ ಹಣವನ್ನು ಉತ್ತಮವಾಗಿ ಬಳಕೆ ಮಾಡಿ ಕೋವಿಡ್-19 ಪ್ರಯೋಗಾಲಯ ನಿರ್ಮಿಸಿದ್ದಾರೆ ಎಂದು ಪ್ರಶಂಸಿಸಿದರು.
ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಯ ಉಪ ನಿರ್ದೇಶಕರಾದ ಗೌರವ್ ಕುಮಾರ್ ಶೆಟ್ಟಿಯವರು ಮಾತನಾಡಿ, ರಾಜ್ಯ ಸರ್ಕಾರದ 2 ತಿಂಗಳ ಪಡಿತರ ಮತ್ತು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಪಡಿತರ ವಿತರಿಸಲಾಗಿದೆ. ಅಲ್ಲದೆ ಪಡಿತರ ಚೀಟಿ ಹೊಂದಿಲ್ಲದ ವಲಸಿಗರಿಗೂ ಸಹ ಆಧಾರ್ ಕಾರ್ಡ್ ಮುಖೇನ ಪಡಿತರ ವಿತರಿಸಲಾಗಿದೆ ಎಂದು ಅವರು ತಿಳಿಸಿದರು.
ಇಲಾಖೆ ವತಿಯಿಂದ ಸಮರ್ಪಕವಾಗಿ ಪಡಿತರ ವಿತರಣೆ ಮಾಡಿ, ಜಿಲ್ಲೆಯಲ್ಲಿ ಪ್ರಸ್ತು ಎಷ್ಟು ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್‍ಗಳಿವೆ ಎಂಬ ಬಗ್ಗೆ ಸಂಸದರು ಆಹಾರ ಇಲಖೆಯ ಉಪನಿರ್ದೇಶಕರನ್ನು ಪ್ರಶ್ನಿಸಿದರು.
ಇದಕ್ಕುತ್ತರಿಸಿದ ಆಹಾರ ಇಲಾಖೆಯ ಉಪ ನಿರ್ದೇಶಕರು, ಜಿಲ್ಲೆಯಲ್ಲಿ 10,046 ಅಂತ್ಯೋದಯ, 99,358 ಬಿಪಿಎಲ್ ಮತ್ತು 29,613 ಎಪಿಲ್ ಕಾರ್ಡುದಾರರ ಕುಟುಂಬಗಳಿವೆ ಎಂದು ಮಾಹಿತಿ ನೀಡಿದರು.
ಸ್ವಚ್ಛ ಭಾರತ್ ಯೋಜನೆಯಡಿ ನಗರ, ಪಟ್ಟಣ ಮತ್ತು ಗ್ರಾಮಪಂಚಾಯಿತಿ ಮಟ್ಟದಲ್ಲಿ ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿ ಘಟಕಗಳ ನಿರ್ವಹಣೆ, ತ್ಯಾಜ್ಯ ಸಂಸ್ಕರಣೆಗೆ ಹೆಚ್ಚಿನ ಆದ್ಯತೆ ನೀಡಿ ಕೇಂದ್ರ ಸರ್ಕಾರದ ಮಹತ್ವದ ಸ್ವಚ್ಛ ಭಾರತ ಯೋಜನೆಯನ್ನು ಯಶಸ್ವಿಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಂಸದರು ಸೂಚಿಸಿದರು.
ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಗೆ, ರೈತರಿಗೆ ಹೆಚ್ಚಿನ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದರೊಂದಿಗೆ ಕೇಂದ್ರ ಸರ್ಕಾರದ ಯೋಜನೆಗಳನ್ನು ರೈತರಿಗೆ ಸಮರ್ಪಕವಾಗಿ ತಲುಪಿಸುವಂತೆ ಸಂಸದರಾದ ಪ್ರತಾಪ್ ಸಿಂಹ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಲಕ್ಷ್ಮೀ ಪ್ರಿಯ ಅವರು, ಜಿ.ಪಂ ಯೋಜನೆಗಳ ಅನುಷ್ಠಾನದ ಪ್ರಗತಿ ಮಾಹಿತಿಯನ್ನು ಸಭೆಗೆ ನೀಡಿದರು.
ತಾಲೂಕು ಪಂಚಾಯತ್ ಅಧ್ಯಕ್ಷರಾದ ತೆಕ್ಕಡೆ ಶೋಭ ಮೋಹನ್, ಪುಷ್ಪಾ ರಾಜೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್, ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಹೇಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ತಹಶೀಲ್ದಾರರು, ತಾಲೂಕು ಪಂಚಾಯಿತಿ ಇಒಗಳು, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು, ವಿವಿಧ ಇಲಾಖಾಧಿಕಾರಿಗಳು ಇತರರು ಹಾಜರಿದ್ದರು.