ಕೊನೆಗೂ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ : ಮಡಿಕೇರಿ ಆಸ್ಪತ್ರೆಯ ಹೆರಿಗೆ ವಾರ್ಡ್ ನಲ್ಲಿ ಆರೋಗ್ಯ ಸುರಕ್ಷತಾ ಕ್ರಮ ಬಿಗಿ

01/07/2020

ಮಡಿಕೇರಿ ಜು.1 : ಮಡಿಕೇರಿ ನಗರದ ಜಿಲ್ಲಾಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ಆರೋಗ್ಯ ಸುರಕ್ಷತಾ ಕ್ರಮಗಳನ್ನು ಬಿಗಿಗೊಳಿಸಲಾಗಿದೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಹೆರಿಗೆ ಆಸ್ಪತ್ರೆಯಲ್ಲಿ ಮಾತ್ರ ಯಾವುದೇ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿರಲಿಲ್ಲ.
ಹೆರಿಗೆಗೆಂದು ದಾಖಲಾದ ಮತ್ತು ಹೆರಿಗೆಯಾದ ಮಹಿಳೆಯರನ್ನು ನೋಡಲೆಂದು ಕುಟುಂಬದ ಸದಸ್ಯರು ಯಾವುದೇ ಅಡೆತಡೆಗಳಿಲ್ಲದೆ ವಾರ್ಡ್‍ಗಳಿಗೆ ಬಂದು ಹೋಗುತ್ತಿದ್ದರು. ಮುಖ್ಯ ದ್ವಾರದಲ್ಲಿ ಆರೋಗ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿರಲಿಲ್ಲ್ಲ. ಜ್ವರ ಪರೀಕ್ಷಾ ಕ್ರಮವನ್ನು ಕೂಡ್ಲನುಸರಿಸುತ್ತಿರಲಿಲ್ಲ. ಮಾಸ್ಕ್ ಮತ್ತು ಗ್ಲೌಸ್ ಗಳಿಲ್ಲದೆ ರಾಜಾರೋಷವಾಗಿ ಓಡಾಡುತ್ತಿದ್ದ ದೃಶ್ಯವನ್ನು ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದು ಜಿಲ್ಲಾಡಳಿತದ ಗಮನ ಸೆಳೆದಿದ್ದರು. ಈ ನಿರ್ಲಕ್ಷ್ಯವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮುಖ್ಯ ದ್ವಾರದಲ್ಲೇ ಆರೋಗ್ಯ ಸುರಕ್ಷತಾ ಕ್ರಮಗಳನ್ನು ಬಿಗಿಗೊಳಿಸಲು ಸೂಚಿಸಿದ್ದಾರೆ. ಅಲ್ಲದೆ ಸ್ವಚ್ಛತೆಗೆ ಆದ್ಯತೆ ನೀಡುವಂತೆ ತಿಳಿಸಿದ್ದಾರೆ.
ಇದೀಗ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ವಾರ್ಡ್‍ಗಳಿಗೆ ಪ್ರವೇಶಿಸುವವರ ಮೇಲೆ ನಿಗಾ ಇರಿಸಿದೆ.
ದೂರಿಗೆ ತಕ್ಷಣ ಸ್ಪಂದಿಸಿದ ಜಿಲ್ಲಾಧಿಕಾರಿಗಳಿಗೆ ಸಾರ್ವಜನಿಕರು ಕೃತಜ್ಞತೆ ಸಲ್ಲಿಸಿದ್ದಾರೆ.