ಕೋವಿಡ್‍ಗೆ 382 ಕೋಟಿ ರೂ. ಬಿಡುಗಡೆ

02/07/2020

ಚಿಕ್ಕಮಗಳೂರು ಜು.1 : ಕೊರೋನಾ ಸೋಂಕು ನಿರ್ವಹಣೆಗಾಗಿ ಕಂದಾಯ ಇಲಾಖೆ ಹಾಗೂ ವಿಪತ್ತು ನಿರ್ವಹಣೆ ನಿಧಿಯಿಂದ 382 ಕೋಟಿ ರೂ. ಬಿಡುಗಡೆಗೊಳಿಸಿದ್ದು, ಸದ್ಯ 300 ಕೋಟಿಗೂ ಅಧಿಕ ಹಣ ಲಭ್ಯವಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಅವರು ಬುಧವಾರ ಹೇಳಿದ್ದಾರೆ.
ಇಂದು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಆರ್ಥಿಕತೆ, ನಿರುದ್ಯೋಗದ ಸಮಸ್ಯೆ ಉಲ್ಬಣಗೊಂಡಲ್ಲಿ ಹಣದ ಸದುಪಯೋಗಪಡಿಸಿಕೊಳ್ಳಲಾಗುವುದು. ಕೊರೋನಾ ನಡುವೆಯೂ ರಾಜ್ಯದಲ್ಲಿ ಅಭಿವೃದ್ಧಿಕಾರ್ಯಗಳು ಸರಾಗವಾಗಿ ನಡೆಯಬೇಕು. ಆ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಮುಂದಿನ ಲಾಕ್‍ಡೌನ್ ವೇಳೆಗೆ ಜನರು ನಿಯಮಗಳನ್ನು ಪಾಲಿಸುವಂತೆ ಕಟ್ಟುನಿಟ್ಟಿನ ಕ್ರಮಗಳನ್ನು ರೂಪಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಗುಣಮಟ್ಟದೊಂದಿಗೆ ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಿ ಜನತೆಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಅದಕ್ಕೆ ಬೇಕಾಗುವ ಅನುದಾನವನ್ನು ಬಿಡುಗಡೆಗೊಳಿಸಲು ಸಿದ್ಧ ಎಂದು ಆರ್. ಅಶೋಕ್ ಹೇಳಿದ್ದಾರೆ.