ಆರೋಗ್ಯ ಯೋಧರಿಗೆ ರಿಸ್ಕ್ ಭತ್ಯೆ

07/07/2020

ಬೆಂಗಳೂರು ಜು.6 : ಕೋವಿಡ್ ವಿರುದ್ಧದ ಸಮರದಲ್ಲಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಯೋಧರಿಗೆ ರಿಸ್ಕ್ ಭತ್ಯೆ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು `ಡಿ’ ಗ್ರೂಪ್ ನೌಕರರಿಗೆ ವೇತನ ದುಪ್ಪಟ್ಟು ಮಾಡುವುದು ಸೇರಿದಂತೆ ಎಲ್ಲಾ ಆರೋಗ್ಯ ಯೋಧರಿಗೆ ರಿಸ್ಕ್ ಭತ್ಯೆ ನೀಡಲು ಸರ್ಕಾರ ಚಿಂತನೆ ನಡೆಸಿದ್ದು 2-3 ದಿನಗಳಲ್ಲಿ ಸ್ಪಷ್ಟವಾಗಲಿದೆ ಎಂದು ಹೇಳಿದರು. ಆರೋಗ್ಯ ಯೋಧರಾಗಿ ಕೆಲಸ ಮಾಡುತ್ತಿರುವ ಎಲ್ಲರೂ ಸುಮಾರು 120 ದಿನಗಳಿಂದ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಕುಗ್ಗಿಹೋಗಿದ್ದಾರೆ. ಅವರುಗಳಿಗೆ ಸೋಂಕು ತಗುಲುವ ಅಪಾಯ ಹೆಚ್ಚಾಗಿದ್ದು ಅವರ ಆತ್ಮಸ್ಥೈರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಈ ಹೆಚ್ಚುವರಿ ಭತ್ಯೆ ಅಲ್ಪಮಟ್ಟಿನ ಪರಿಹಾರವಾಗಲಿದೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ನಿಯಂತ್ರಿಸಲು ಸರ್ಕಾರ ಮತ್ತಷ್ಟು ಬಿಗಿಕ್ರಮಗಳನ್ನು ಕೈಗೊಳ್ಳುತ್ತಿದೆ. ಪ್ರತಿದಿನ ಕೋವಿಡ್ ಟೆಸ್ಟಿಂಗ್ ಹೆಚ್ಚಿಸುವ ಗುರಿಹೊಂದಲಾಗಿದ್ದು ಕಳೆದ 24 ಗಂಟೆಗಳಲ್ಲಿ 15 ಸಾವಿರಕ್ಕೂ ಅಧಿಕ ಪರೀಕ್ಷೆ ನಡೆಸಲಾಗಿದೆ, ಟೆಸ್ಟಿಂಗ್ ನಿರ್ವಹಣೆಗೆ ಹಿರಿಯ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಸಚಿವರು ತಿಳಿಸಿದರು.