ಮಹಾಮಳೆ : ಭಾಗಮಂಡಲ- ತಲಕಾವೇರಿ ರಸ್ತೆಯಲ್ಲಿ ಗುಡ್ಡ ಕುಸಿತ
07/07/2020

ಮಡಿಕೇರಿ ಜು.7 : ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆ ಸುರಿದ ಪರಿಣಾಮ ಭಾಗಮಂಡಲ- ತಲಕಾವೇರಿ ರಸ್ತೆಯಲ್ಲಿ ಗುಡ್ಡ ಕುಸಿತ ಉಂಟಾಗಿದೆ. ರಸ್ತೆ ತುಂಬಾ ಮಣ್ಣಿನ ರಾಶಿ ಬಿದ್ದಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಮಣ್ಣನ್ನು ತೆರವುಗೊಳಿಸುವ ಕಾರ್ಯಾಚರಣೆ ಕೈಗೊಂಡಿದ್ದಾರೆ. ಸ್ಥಳೀಯ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ಮುಂಬರುವ ದಿನಗಳಲ್ಲಿ ಅತಿಯಾದ ಮಳೆಯಾದರೆ ಮತ್ತಷ್ಟು ಅನಾಹುತಗಳು ಸಂಭವಿಸಬಹುದೆನ್ನುವ ಭಯವಿದೆ. ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಕೇಶ ಮುಂಡನ ಸ್ಥಳ, ನಾಗನ ಕಟ್ಟೆಯ ಮೆಟ್ಟಿಲಿನವರೆಗೆ ನೀರು ಬಂದಿದ್ದು, ಜನರು ನದಿಗೆ ಇಳಿಯದಂತೆ ಬ್ಯಾರಿಕೇಡ್ ಅಳವಡಿಸಲಾಗಿದೆ.