ಕೇಂದ್ರ ಆರೋಗ್ಯ ಸಚಿವಾಲಯ ಮೆಚ್ಚುಗೆ

08/07/2020

ಬೆಂಗಳೂರು ಜು.8 : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಇಂದು ಭೇಟಿಯಾದ ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಗಳ ತಂಡವು ರಾಜ್ಯದ ಕೋವಿಡ್ ನಿರ್ವಹಣೆಯ ಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿತು.
ಕೇಂದ್ರ ಆರೋಗ್ಯ ಸಚಿವಾಲಯದ ಅಪರ ಕಾರ್ಯದರ್ಶಿ ಆರ್ತಿ ಅಹುಜಾ ಹಾಗೂ ತುರ್ತು ವೈದ್ಯಕೀಯ ಸ್ಪಂದನಾ ಕೇಂದ್ರದ ನಿರ್ದೇಶಕ ಡಾ. ರವೀಂದ್ರನ್ ಅವರು ರಾಜ್ಯಕ್ಕೆ ಎರಡು ದಿನಗಳ ಭೇಟಿಯ ಸಂದರ್ಭದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಸಂಪರ್ಕಿತರ ಪತ್ತೆ ಹಚ್ಚುವುದು ಹಾಗೂ ಕೊ-ಮಾರ್ಬಿಡ್ ವ್ಯಕ್ತಿಗಳನ್ನು ಗುರುತಿಸಿ, ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಈ ತಂಡವು ಪ್ರಶಂಸೆ ಮಾಡಿತು. ಮುಂದಿನ ದಿನಗಳಲ್ಲಿ, ಕೋವಿಡ್ ನಿಂದ ಉಂಟಾಗುವ ಮರಣವನ್ನು ತಡೆಗಟ್ಟಲು ಹಾಗೂ ರೋಗ ಲಕ್ಷಣ ಇರುವ ಸೋಂಕಿತರಿಗೆ ಸೂಕ್ತ ಚಿಕಿತ್ಸಾ ಸೌಲಭ್ಯ ಒದಗಿಸಲು ಆದ್ಯತೆ ನೀಡಬೇಕಾಗಿದೆ. ಜೊತೆಗೆ ಕಂಟೇನ್ ಮೆಂಟ್ ವಲಯಗಳಲ್ಲಿ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಪಾಲನೆಯಾಗಬೇಕಾಗಿದೆ ಎಂದು ಕೇಂದ್ರ ತಂಡದ ಅಧಿಕಾರಿಗಳು ಸಲಹೆ ನೀಡಿದರು.