ರಾಜ್ಯದ ವಿವಿಧೆಡೆ ಭಾರೀ ಮಳೆ

09/07/2020

ಉಡುಪಿ ಜು.9 : ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಜನರ ಜೀವನ ಅಸ್ತವ್ಯಸ್ತವಾಗಿತ್ತದೆ. ಇತ್ತ ಮಳೆಯಿಂದ ಅನೇಕ ನದಿಗಳು ತುಂಬಿ ಹರಿಯುತ್ತಿವೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಅಬ್ಬರದ ಮಳೆ ಸುರಿಯುತ್ತಿದೆ. ಕರಾವಳಿ ಭಾಗದ ಅಂಕೋಲ ಭಾಗದಲ್ಲಿ ಅಬ್ಬರದ ಮಳೆಗೆ ಗಂಗಾವಳಿ ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮ ತಗ್ಗು ಪ್ರದೇಶ ಶಿರೂರು ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಮಳೆಯ ಅಬ್ಬರಕ್ಕೆ ಆವರ್ಸಾದ ಬಳಿ ವಿದ್ಯುತ್ ಕಂಬ ಉರುಳಿ ಎರಡು ಹಸುಗಳು ಸಾವು ಕಂಡಿವೆ. ಕರಾವಳಿ ಉದ್ದಕ್ಕೂ ಮಳೆ ಪ್ರಮಾಣ ಹೆಚ್ಚಾಗಿದ್ದು, ಸಮುದ್ರದ ಅಲೆಯ ಪ್ರಮಾಣ ಸಹ ಏರಿಕೆಯಾಗಿದೆ. ಹೀಗಾಗಿ ಮೀನುಗಾರಿಕೆ ಸಹ ಬಂದ್ ಮಾಡಲಾಗಿದೆ. ಇನ್ನೂ ನಾಲ್ಕು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.