ಕೊಡಗಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ : ಗಡಿಯಲ್ಲಿ ಕಟ್ಟೆಚ್ಚರಕ್ಕೆ ಚೇಂಬರ್ ಆಫ್ ಕಾಮರ್ಸ್ ಮನವಿ

July 10, 2020

ಮಡಿಕೇರಿ ಜು.10 : ಗಡಿಭಾಗಗಳಲ್ಲಿ ತಪಾಸಣಾ ಕೇಂದ್ರಗಳು ಇಲ್ಲದೆ ಇರುವುದು ಮತ್ತು ಇರುವ ಕೇಂದ್ರಗಳು ಸಕ್ರಿಯವಾಗದೆ ಇರುವುದೇ ಕೊಡಗು ಜಿಲ್ಲೆಯಲ್ಲಿ ಕೊರೋನಾ ಸೋಂಕು ವ್ಯಾಪಿಸುತ್ತಿರುವುದಕ್ಕೆ ಪ್ರಮುಖ ಕಾರಣವೆಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣರ ಗಮನ ಸೆಳೆದಿರುವ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಸೋಂಕು ಹರಡುವುದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದೆ.
ನಗರದ ಜಿ.ಪಂ ಸಭಾಂಗಣದಲ್ಲಿ ಸಚಿವರೊಂದಿಗೆ ಚರ್ಚಿಸಿದ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಎಂ.ಬಿ.ದೇವಯ್ಯ, ಈ ಹಿಂದೆ ರಾಜ್ಯ ಸರ್ಕಾರ ಕೊರೋನಾ ವೈರಸ್ ಹರಡದಂತೆ ಉತ್ತಮ ನಿರ್ಧಾರಗಳನ್ನು ಕೈಗೊಂಡು ಯಶಸ್ವಿಯಾಗಿತ್ತು. ಆದರೆ ಸೋಂಕು ವ್ಯಾಪಕವಾಗಿ ವ್ಯಾಪಿಸುತ್ತಿರುವ ಸಂದರ್ಭದಲ್ಲಿ ನಿಯಮಗಳನ್ನು ಸಡಿಲಿಕೆ ಮಾಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಜಿಲ್ಲಾ ಗಡಿಭಾಗಗಳಲ್ಲಿ ಯಾವುದೇ ರೀತಿಯ ತಪಾಸಣಾ ಕೇಂದ್ರಗಳು ಇಲ್ಲದೇ ಇರುವುದೇ ಸೋಂಕಿತರ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ. ಅಲ್ಲದೇ ಅಂತರ್ ಜಿಲ್ಲೆ ಹಾಗೂ ಅಂತರರಾಜ್ಯದಿಂದ ಜಿಲ್ಲೆಗೆ ಆಗಮಿಸುವವರು ಜಿಲ್ಲಾಡಳಿತಕ್ಕೆ ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂದು ಗಮನ ಸೆಳೆದರು.
ಇದೇ ಸಂದರ್ಭ ಮಾತನಾಡಿದ ಚೇಂಬರ್‍ನ ಪ್ರಮುಖರು ಆಸ್ತಿ ತೆರಿಗೆ ಪಾವತಿಸಲು ಆ.30ರ ವರೆಗೆ ಅವಕಾಶವನ್ನು ಕಲ್ಪಿಸಿಕೊಟ್ಟಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ವಿ.ಸೋಮಣ್ಣ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಜಂಟಿಯಾಗಿ ಚರ್ಚಿಸಿ ಕಾನೂನಿನ ಚೌಕಟ್ಟಿನಡಿ ಕ್ರಮ ಕೈಗೊಳ್ಳಲಿದ್ದಾರೆ. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ನಗರಸಭೆ ಆಸ್ತಿ ತೆರಿಗೆ ವಿನಾಯ್ತಿ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಂಬೆಕಲ್ ನವೀನ್ ಕುಶಾಲಪ್ಪ, ನಗರ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಎಂ.ಧನಂಜಯ, ಪ್ರಧಾನ ಕಾರ್ಯದರ್ಶಿ ಸಂತೋಷ್ ಅನ್ವೇಕರ್, ಸಹ ಕಾರ್ಯದರ್ಶಿ ವಿನಾಯಕ್ ಕುಡ್ತೇಕರ್, ಖಜಾಂಚಿ ಅಹಮದ್ ಕಬೀರ್ ಹಾಜರಿದ್ದರು.

error: Content is protected !!