ತಹಶೀಲ್ದಾರ್ ಚಂದ್ರಮೌಳೇಶ್ವರ ಹತ್ಯೆಗೆ ಸರ್ಕಾರಿ ನೌಕರರ ಸಂಘ ಖಂಡನೆ

10/07/2020

ಸೋಮವಾರಪೇಟೆ ಜು.10 : ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ತಹಶೀಲ್ದಾರ್ ಬಿ.ಕೆ.ಚಂದ್ರಮೌಳೇಶ್ವರ ಅವರ ಕೊಲೆಯನ್ನು ಖಂಡಿಸಿ, ಸರ್ಕಾರಿ ನೌಕರರಿಗೆ ಸರ್ಕಾರ ಸೂಕ್ತ ಭದ್ರತೆಯನ್ನು ಕಲ್ಪಿಸಬೇಕೆಂದು ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆಯ ವತಿಯಿಂದ ಶುಕ್ರವಾರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸರ್ಕಾರಿ ನೌಕರರಿಗೆ ಸೂಕ್ತ ಭದ್ರತೆ ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯುತ್ತಿರುತ್ತವೆ. ಅಪರಾಧಿಗಳ ವಿರುದ್ಧ ಕಠಿಣ ಕಾನೂನು ರೂಪಿಸಬೇಕು ಮೃತರ ಕುಟುಂಬದವರೊಬ್ಬರಿಗೆ ಅನುಕಂಪ ಆಧಾರದಲ್ಲಿ ಸರ್ಕಾರಿ ಹುದ್ದೆ ಕಲ್ಪಿಸಬೇಕು. ಹೆಚ್ಚಿನ ಪರಿಹಾರ ನೀಡಬೇಕು. ಸಿಗಬೇಕಾದ ಸೌಲಭ್ಯಗಳನ್ನು ಶೀಘ್ರ ಕೊಡಬೇಕು ಎಂದು ಸಂಘದ ಅಧ್ಯಕ್ಷ ಪ್ರದೀಪ್ ಆಗ್ರಹಿಸಿದರು. ಮನವಿ ಪತ್ರವನ್ನು ಶಿರಸ್ತೇದಾರ್ ಮಹೇಶ್ ಅವರಿಗೆ ನೀಡಲಾಯಿತು. ಕಾರ್ಯದರ್ಶಿ ಎನ್.ಎಂ.ನಾಗೇಶ್, ಖಜಾಂಚಿ ವಿ.ಜಿ.ದಿನೇಶ್, ಪ್ರಾಥಮಿಕ ಶಿಕ್ಷಕರ ಸಂಘದ ಮೈಸೂರು ವಿಭಾಗೀಯ ಉಪಾಧ್ಯಕ್ಷ ಸಿ.ಕೆ.ಶಿವಕುಮಾರ್ ಮತ್ತಿತರು ಇದ್ದರು.