ಕೊಡಗು ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕಛೇರಿ ಸೀಲ್ ಡೌನ್

12/07/2020

ಮಡಿಕೇರಿ ಜು.12 : ಕೊಡಗು ಜಿಲ್ಲೆಯ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಯೊಬ್ಬರಿಗೆ ಕೋವಿಡ್-19 ಪರೀಕ್ಷೆಯಲ್ಲಿ ಕೊರೋನಾ ದೃಢಪಟ್ಟಿರುವುದರಿಂದ, ಸಿಬ್ಬಂದಿಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕರ್ತವ್ಯ ನಿರ್ವಹಿಸುತ್ತಿದ್ದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕಛೇರಿಯನ್ನು ಸ್ಯಾನಿಟೈಸ್ ಮಾಡಿ ಸೀಲ್ಡೌನ್ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ತಿಳಿಸಿದ್ದಾರೆ. ಸಿಬ್ಬಂದಿ ವಾಸವಿದ್ದ ವಸತಿ ಗೃಹದ ಸುತ್ತಲಿನ 8 ವಸತಿಗೃಹಗಳ ವ್ಯಾಪ್ತಿಯನ್ನು ಕಂಟೇನ್ಮೆಂಟ್ ವಲಯ ಎಂದು ಘೋಷಿಸಲಾಗಿದೆ.
ವಸತಿ ಗೃಹಗಳಲ್ಲಿ ವಾಸವಿದ್ದ ಸಿಬ್ಬಂದಿ ಹಾಗೂ ಕುಟುಂಬ ಸದಸ್ಯರನ್ನು ಹೋಂ ಕ್ವಾರಂಟೇನ್ ನಲ್ಲಿ ಇರುವಂತೆ ಸೂಚಿಸಲಾಗಿದೆ. ಸದರಿ ಸಿಬ್ಬಂದಿಯ ಪ್ರಾಥಮಿಕ ಸಂಪರ್ಕ ಹೊಂದಿದ ಸುಮಾರು 15 ವ್ಯಕ್ತಿಗಳನ್ನು ಕೋವಿಡ್-19 ಪರೀಕ್ಷೆಗೆ ಮಾದರಿಯನ್ನು ನೀಡುವಂತೆ ಹಾಗೂ ಹೋಂ ಕ್ವಾರಂಟೇನ್ ನಲ್ಲಿ ಇರಲು ಸೂಚಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳ ಆರೋಗ್ಯದ ಬಗ್ಗೆ ಪೊಲೀಸ್ ಇಲಾಖೆ ತೀವ್ರ ಕಾಳಜಿಯನ್ನು ತೋರಿದೆ. ಪ್ರಥಮ ಹಂತದಲ್ಲಿ ಈಗಾಗಲೇ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಕೋವಿಡ್-19 ಪರೀಕ್ಷೆಯನ್ನು ನಡೆಸಲಾಗಿದ್ದು, ಇದು ಪ್ರಥಮ ಪಾಸಿಟಿವ್ ವರದಿಯಾಗಿದೆ ಎಂದು ಎಸ್‍ಪಿ ತಿಳಿಸಿದ್ದಾರೆ.
ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ, ಸಾರ್ವಜನಿಕರನ್ನು ಭೇಟಿ ಮಾಡುವ ಸಂದರ್ಭ ಸಾಮಾಜಿಕ ಅಂತರ ಕಾಯ್ದುಕೊಂಡು ಪೊಲೀಸ್ ಇಲಾಖೆಯ ವತಿಯಿಂದ ವಿತರಿಸಲಾಗಿರುವ ಸುರಕ್ಷಾ ಸಾಮಾಗ್ರಿಗಳನ್ನು ಉಪಯೋಗಿಸಿಕೊಂಡು ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸುವಂತೆ ಸಲಹೆ ನೀಡಲಾಗಿದೆ ಎಂದು ಎಸ್ ಪಿ ಮಾಹಿತಿ ನೀಡಿದ್ದಾರೆ.