ರಾಜ್ಯ ಸರ್ಕಾರದ ವಿರುದ್ಧ ಮಡಿಕೇರಿಯಲ್ಲಿ ರೈತ ಸಂಘ ಪ್ರತಿಭಟನೆ

21/07/2020

ಮಡಿಕೇರಿ ಜು.21 : ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೊಡಗು ಜಿಲ್ಲಾ ಘಟಕ ನಗರದಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ರೈತ ಸಂಘದ ಪದಾಧಿಕಾರಿಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಚಿಮ್ಮಂಗಡ ಗಣೇಶ್ ಗಣಪತಿ, ರಾಜ್ಯ ಸರ್ಕಾರವು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆಯಿಂದಾಗಿ ರೈತಾಪಿ ವರ್ಗಕ್ಕೆ ದೊಡ್ಡ ಅನ್ಯಾಯವಾಗಲಿದೆÉ ಎಂದು ಅಭಿಪ್ರಾಯಪಟ್ಟರು.
ಈ ರೀತಿಯ ಕಾಯ್ದೆಯನ್ನು ಜಾರಿಗೆ ತರುವ ಮೊದಲು ರೈತರೊಂದಿಗೆ ಸಮಾಲೋಚಿಸಿ ಇದರ ಸಾಧಕ-ಬಾಧಕಗಳನ್ನು ಅವಲೋಕಿಸಬೇಕಾಗಿತ್ತು. ಆದರೆ ಇದ್ಯಾವುದನ್ನೂ ಮಾಡದೆ ಸ್ವಾರ್ಥಕ್ಕಾಗಿ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳ ಕಾಲ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ರೈತರು ತಮ್ಮ ಭೂಮಿಯನ್ನು ಕಳೆದುಕೊಂಡು ಕಂಗಲಾಗಿದ್ದಾರೆ. ಈ ಸಂದಿಗ್ಧ ಪರಿಸ್ಥಿತಿಯಲ್ಲಿ ನೆರವಿಗೆ ಬಾರದ ರಾಜ್ಯ ಸರ್ಕಾರ ಇಂದು ಭೂ ಮಾಫಿಯಾಕ್ಕೆ ಮಣಿದು ರೈತ ವಿರೋಧಿ ಮಸೂದೆಯನ್ನು ಜಾರಿ ಮಾಡಿದೆ ಎಂದು ಆರೋಪಿಸಿದರು.
ಮುಖ್ಯಮಂತ್ರಿಗಳು ರೈತಪರ ಸರ್ಕಾರ ಎಂದು ಹೇಳಿಕೊಳ್ಳುತ್ತಿದ್ದರೂ, ಈಗ ರೈತರ ಭೂಮಿಯನ್ನು ಕಸಿದುಕೊಳ್ಳುವ ಸಂಚು ರೂಪಿಸಿದ್ದಾರೆ ಎಂದು ದೂರಿದ ಗಣೇಶ್, ಕಾಯ್ದೆಯನ್ನು ತಕ್ಷಣ ಹಿಂಪಡೆಯದಿದ್ದಲ್ಲಿ ಆಗಸ್ಟ್ 15 ರಂದು ಕರಾಳ ದಿನವನ್ನು ಆಚರಿಸಲಾಗುವುದು ಮತ್ತು ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಳ್ಳಿಚಂಡ ಧನು, ಕಾರ್ಯದರ್ಶಿ ಮುತ್ತು, ಖಜಾಂಚಿ ಚಂಗುಲಂಡ ರಾಜಪ್ಪ, ಸಂಚಾಲಕ ಮಹೇಶ್, ವಿರಾಜಪೇಟೆ ಹೋಬಳಿ ಅಧ್ಯಕ್ಷ ಗಿರೀಶ್ ಸೋಮಯ್ಯ, ಪೆÇನ್ನಂಪೇಟೆ ತಾಲ್ಲೂಕು ಅಧ್ಯಕ್ಷ ಚೆಪ್ಪುಡಿಮಾಡ ಮಹೇಶ್, ಪ್ರಮುಖರಾದ ಮಂಜು, ವಿನು, ಐಮಾಡ ಹ್ಯಾರಿ, ರಾಜ, ಕರಿನೆರವಂಡ ಜಿತನ್ ಮತ್ತಿತರ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಇದೇ ಸಂದರ್ಭ ಪ್ರತಿಭಟನಾಕಾರರು ಈ ಹಿಂದೆ ಹಾವೇರಿ ಗೋಲಿಬಾರ್‍ನಲ್ಲಿ ಹುತಾತ್ಮರಾದ ರೈತರಿಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು.