ಬೆಸೂರಿನಲ್ಲಿ ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

23/07/2020

ಮಡಿಕೇರಿ ಜು. 23 : ಸಾಲ ಬಾಧೆಯಿಂದ ರೈತ ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರಪೇಟೆ ತಾಲ್ಲೂಕಿನ ಬೆಸೂರಿನಲ್ಲಿ ನಡೆದಿದೆ.
ಬೆಸೂರು ಪಂಚಾಯಿತಿ ವ್ಯಾಪ್ತಿಯ ನಿಲುವಾಗಿಲು ಗ್ರಾಮದ ನಾಗಣ್ಣ ( 58) ತಮ್ಮ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶನಿವಾರಸಂತೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹಾಸನದ ಮಿಷನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ನಾಗಣ್ಣ ಅವರು ಒಂದು ಎಕರೆ ಜಮೀನು ಹೊಂದಿದ್ದು, ಕೃಷಿಗಾಗಿ ಬೆಸೂರು ಕೃಷಿ ಪತ್ತಿನ ಸಹಕಾರ ಬ್ಯಾಂಕ್‍ನಿಂದ 80 ಸಾವಿರ ರೂ. ಸಾಲ ಪಡೆದಿದ್ದರೆನ್ನಲಾಗಿದೆ. ಇವರಿಗೆ ಅನಾರೋಗ್ಯದಿಂದ ಬಳಲುತ್ತಿರುವ ಮಗನಿದ್ದು, ಇತ್ತೀಚಿಗೆ ಅನ್ನನಾಳ ಸಮಸ್ಯೆಯಿದ್ದ ಮಗಳಿಗೆ ಶಸ್ತ್ರ ಚಿಕಿತ್ಸೆ ಮಾಡಿಸಲಾಗಿದೆ. ಆದ್ದರಿಂದ ಸುಮಾರು 3 ಲಕ್ಷ ರೂ. ಕೈಸಾಲ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.