ಸಿಇಟಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

29/07/2020

ಮಡಿಕೇರಿ ಜು. 29 : ಜಿಲ್ಲೆಯಲ್ಲಿ ಜುಲೈ 30 ಮತ್ತು 31 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿ ಇ ಟಿ) ನಡೆಯಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಸಿಇಟಿ-2020 ಪರೀಕ್ಷೆಗಳನ್ನು ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರ ಅಡಿ ದತ್ತವಾದ ಅಧಿಕಾರದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಸ್ಥಳ ಎಂದು ಘೋಷಿಸಿ ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರದ ಹೆಸರು : ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಜೋಸೆಫರ ಬಾಲಕಿಯರ ಸಂಯುಕ್ತ ಪದವಿ ಪೂರ್ವ ಕಾಲೇಜು, ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ವಿರಾಜಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್/ ಮುಖಗವಸು ಧರಿಸುವುದು, ಶುಚಿತ್ವ ಮತ್ತು ನೈರ್ಮಲ್ಯ ಕಾಪಾಡುವುದು, ಪರೀಕ್ಷಾ ಕೇಂದ್ರದ ಆವರಣದೊಳಗೆ ಸಂಬಂಧಪಡದ ಯಾವುದೇ ವ್ಯಕ್ತಿಗಳ ಪ್ರವೇಶ ನಿಷೇಧಿಸಿದೆ, ಯಾವುದೇ ನಿಯಮಬಾಹಿರ ಚಟುವಟಿಕೆ/ಅವ್ಯವಹಾರಗಳಿಗೆ ಆಸ್ಪದವಿರತಕ್ಕದ್ದಲ್ಲ.
ಈ ಆದೇಶವು ಪರೀಕ್ಷಾ ದಿನಗಳಂದು ಬೆಳಗ್ಗೆ 10 ಗಂಟೆಯಿಂದ ಅಪರಾಹ್ನ 4.30 ಗಂಟೆಯ ವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.