ಕೋವಿಡ್ ಸುರಕ್ಷಾ ಸಾಮಾಗ್ರಿಗೆ ಒತ್ತಾಯ : ಮಡಿಕೇರಿಯಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

29/07/2020

ಮಡಿಕೇರಿ ಜು. 29 : ಆಶಾ ಕಾರ್ಯಕರ್ತೆಯರಿಗೆ ಮಾಸಿಕ ರೂ.12 ಸಾವಿರ ಗೌರವಧನ ಖಾತರಿಪಡಿಸಬೇಕು ಮತ್ತು ಕೋವಿಡ್-19 ವಿರುದ್ಧದ ಹೋರಾಟಕ್ಕೆ ಅಗತ್ಯವಿರುವ ರಕ್ಷಣಾ ಸಾಮಾಗ್ರಿಗಳನ್ನು ನೀಡಬೇಕೆಂದು ಒತ್ತಾಯಿಸಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕೊಡಗು ಘಟಕ ನಗರದಲ್ಲಿ ಪ್ರತಿಭಟನೆ ನಡೆಸಿತು.
ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿರುವ ನಮ್ಮನ್ನು ಸರ್ಕಾರ ಕಡೆಗಣಿಸಿದೆ ಎಂದು ಆರೋಪಿಸಿದರು.
ಎಐಯುಟಿಯುಸಿ ರಾಜ್ಯ ಸಮಿತಿ ಸದಸ್ಯ ಮುದ್ದುಕೃಷ್ಣ ಮಾತನಾಡಿ, ಆಶಾ ಕಾರ್ಯಕರ್ತರಿಗೆ ಮಾಸಿಕ ರೂ.12 ಸಾವಿರ ನೀಡುವಂತೆ ಒತ್ತಾಯಿಸಿ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಗಳನ್ನು ನಡೆಸಿ ಸರ್ಕಾರದ ಗಮನ ಸೆಳೆದಿದ್ದರೂ ಯಾವುದೇ ಸ್ಪಂದನೆ ದೊರತ್ತಿಲ್ಲವೆಂದರು.
ಕೊಡಗಿನಂತಹ ಬೆಟ್ಟಗುಡ್ಡದ ಪ್ರದೇಶದಲ್ಲಿ ಶ್ರಮವಹಿಸಿ ಗರ್ಭಿಣಿ ಮಹಿಳೆಯರ ಸುರಕ್ಷತೆ, ಹೆರಿಗೆ, ಸ್ವಸ್ಥ ಶಿಶುವಿನ ಜನನ, ಆರೈಕೆ ಹಾಗೂ ಆರೋಗ್ಯದ ಬಗ್ಗೆ ಗಮನ ಹರಿಸಿ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವಲ್ಲಿ ಶ್ರಮವಹಿಸುತ್ತಿದ್ದು, ಸರ್ಕಾರ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲಿ ಎಂದು ಆಗ್ರಹಿಸಿದರು.
ಕೊವೀಡ್-19ರ ವಿರುದ್ಧದ ಹೋರಾಟದಲ್ಲಿ ಆಶಾ ಕಾರ್ಯಕರ್ತರ ಪಾತ್ರ ಮಹತ್ತವಾಗಿದ್ದರೂ ದುಡಿಮೆಗೆ ತಕ್ಕ ಪ್ರತಿಫಲವಿಲ್ಲದೆ ಅನಿಶ್ಚಿತ ವೇತನದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ತಕ್ಷಣ ಮಾಸಿಕ ರೂ.12 ಸಾವಿರ ವೇತನ ಮತ್ತು ಕೊರೋನಾ ಸೋಂಕು ನಿಯಂತ್ರಣಕ್ಕೆ ಅಮೂಲ್ಯ ಸೇವೆ ಸಲ್ಲಿಸುತ್ತಿರುವ ಕಾರ್ಯಕರ್ತರ ಆರೋಗ್ಯವನ್ನು ರಕ್ಷಿಸಲು ಅಗತ್ಯವಿರುವ ರಕ್ಷಣಾ ಸಾಮಾಗ್ರಿಗಳನ್ನು ವಿತರಿಸಬೇಕೆಂದು ಒತ್ತಾಯಿಸಿದರು.
ಸಂಘದ ಜಿಲ್ಲಾಧ್ಯಕ್ಷೆ ತೆಕ್ಕಡೆ ಪೂರ್ಣಿಮಾ ಬಸಪ್ಪ, ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.