ಕೊಡಗಿನಲ್ಲಿ ಕೋವಿಡ್‍ಗೆ ಮತ್ತೊಂದು ಬಲಿ : ಮೃತರ ಸಂಖ್ಯೆ 7ಕ್ಕೆ ಏರಿಕೆ

29/07/2020

ಮಡಿಕೇರಿ ಜು.29 : ಕೊಡಗು ಜಿಲ್ಲೆಯಲ್ಲಿ ಬುಧವಾರ 18 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿರುವ ಬೆನ್ನಲ್ಲೇ ಒಬ್ಬರು ಸಾವಿಗೀಡಾಗಿದ್ದು, ಇದರೊಂದಿಗೆ ಕೋವಿಡ್‍ಗೆ ಬಲಿಯಾದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಮಡಿಕೇರಿ ನಗರ ನಿವಾಸಿ, 38 ವರ್ಷದ ವ್ಯಾಪಾರಿಯೊಬ್ಬರಿಗೆ ಜು.21ರಂದು ಜ್ವರ ಕಾಣಿಸಿಕೊಂಡಿದ್ದು, ಖಾಸಗಿ ಕ್ಲಿನಿಕ್‍ನಲ್ಲಿ ಚಿಕಿತ್ಸೆ ಪಡೆದಿದ್ದರೆನ್ನಲಾಗಿದೆ. ಜು.26ರಂದು ಅವರಲ್ಲಿ ತೀವ್ರವಾದ ಜ್ವರ, ಕೆಮ್ಮು ಮತ್ತು ಸುಸ್ತು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ಬಂದು ದಾಖಲಾಗಿದ್ದರು.
ಅವರ ಗಂಟಲು, ಮೂಗು ದ್ರವ ಮಾದರಿಯನ್ನು ಪರೀಕ್ಷಿಸಲಾಗಿ ಅವರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಕೋವಿಡ್ ಆಸ್ಪತ್ರೆಯ ಐ.ಸಿ.ಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಬುಧವಾರ ಸಂಜೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ.