ಹಾಕತ್ತೂರು ಪ್ರೌಢ ಶಾಲೆಯ ವಿದ್ಯಾರ್ಥಿನಿಗೆ ಸನ್ಮಾನ

14/08/2020

ಮಡಿಕೇರಿ ಆ.14 : ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮಡಿಕೇರಿ ತಾಲೂಕಿನ ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕವನ ಪಿ.ಎಸ್. 590 (94.4%) ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣಳಾಗಿ ಸರ್ಕಾರಿ ಶಾಲೆಗಳಲ್ಲಿ ಮಡಿಕೇರಿ ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಹಾಗೆಯೇ ಹಿಂದಿ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಪಡೆದಿದ್ದಾಳೆ.
ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಅವರು ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಹಾಕತ್ತೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಕೆ.ಎ.ರಾಮಚಂದ್ರ, ವಿದ್ಯಾರ್ಥಿನಿಯ ಪೋಷಕರಾದ ಸುಂದರ ಮತ್ತು ಸುನೀತಾ ಹಾಜರಿದ್ದರು. ತನ್ನ ಸಾಧನೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ ವಿದ್ಯಾರ್ಥಿನಿ ಕವನ ತನ್ನ ಸಾಧನೆಗೆ ಪ್ರೇರಣೆ ನೀಡಿದ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದದವರು ಹಾಗೂ ಪೋಷಕರನ್ನು ಸ್ಮರಿಸಿಕೊಂಡಳು. ಹಾಗೆಯೇ ಭವಿಷ್ಯದಲ್ಲಿ ಐ.ಎ.ಎಸ್. ಅಧಿಕಾರಿಯಾಗುವ ಕನಸು ಹಂಚಿಕೊಂಡಳು. ವಿದ್ಯಾರ್ಥಿನಿಯ ತಾಯಿ ಸುನೀತಾರವರು ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷೆಯೂ ಆಗಿದ್ದು, ತಮ್ಮ ಮಗಳ ಸಾಧನೆಗೆ ಸಂತಸ ವ್ಯಕ್ತಪಡಿಸಿದರು.