ಗೂಂಡಾ ಕಾಯ್ದೆಯಡಿ ಬಂಧನ
18/08/2020

ಬೆಂಗಳೂರು ಆ.18 : ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದ ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಗಲಭೆ ಕೋರರ ಹೆಡೆಮುರಿ ಕಟ್ಟಲು ಸರ್ಕಾರ ಮುಂದಾಗಿದ್ದು, ಈ ಸಂಬಂಧ ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ಈ ಬಗ್ಗೆ ಸ್ವತಃ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದು, ಗಲಭೆ ಮಾಡುವವರನ್ನು ಗೂಂಡಾ ಕಾಯ್ದೆಯಡಿ ಬಂಧಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ ಗಲಭೆಯಿಂದ ಸಂಭವಿಸಿದ ನಷ್ಟವನ್ನೂ ಅವರಿಂದಲೇ ವಸೂಲಿ ಮಾಡುವಂತೆ ಸೂಚಿಸಿದ್ದು, ಈ ಸಂಬಂಧ ಕೈಗೊಳ್ಳಬೇಕಾದ ಕಾನೂನು ರೀತಿಯ ಕ್ರಮಗಳನ್ನು ಜರುಗಿಸುವಂತೆಯೂ ಸೂಚನೆ ನೀಡಿದ್ದಾರೆ.
