ಗಣೇಶ ಹಬ್ಬ ಮಾರ್ಗಸೂಚಿ ಪರಿಷ್ಕರಣೆ

19/08/2020

ಬೆಂಗಳೂರು ಆ.19 : ಗಣೇಶ ಹಬ್ಬ ಆಚರಣೆಗೆ ಅಡ್ಡಿಯಾಗಿದ್ದ ಮಾರ್ಗಸೂಚಿ ಪರಿಷ್ಕರಣೆ ಮಾಡಲಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಕೊರೋನಾ ಹಿನ್ನೆಲೆಯಲ್ಲಿ ಗಣೇಶೋತ್ಸವ ಆಚರಣೆಗೆ ಅಡ್ಡಿಯುಂಟಾಗಲಿದೆ ಎಂದು ಸಾರ್ವಜನಿಕರಿಂದ ವ್ಯಕ್ತವಾದ ಆಕ್ಷೇಪಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಪರಿಷ್ಕರಿಸಿದೆ. ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಪೂಜೆ ಪುನಸ್ಕಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಅವರು, ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ. ಕೊರೋನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರ ಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ವಿನಯ ಪೂರ್ವಕ ಮನವಿ ಮಾಡುತ್ತಿದ್ದೇನೆಂದು ಅವರು ಹೇಳಿದ್ದಾರೆ.