ಕೊಡಗಿನಲ್ಲಿ ಕೊವೀಡ್ ಸೋಂಕಿಗೆ ಇಬ್ಬರು ಬಲಿ : ಮೃತರ ಸಂಖ್ಯೆ 14ಕ್ಕೆ ಏರಿಕೆ

19/08/2020

ಮಡಿಕೇರಿ ಆ. 19 : ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಬುಧವಾರ ಇಬ್ಬರು ಸಾವಿಗೀಡಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಸೋಮವಾರಪೇಟೆ ತಾಲೂಕಿನ ಮಾದಾಪುರ ನಿವಾಸಿ 65 ವರ್ಷದ ಮಹಿಳೆ ಹಾಗೂ ವೀರಾಜಪೇಟೆ ತಾಲೂಕಿನ ತಿತಿಮತಿ ಮರೂರು ನಿವಾಸಿ 36 ವರ್ಷದ ಪುರುಷ ಮೃತರು.
ಮಾದಾಪುರ ಮಹಿಳೆ ಕಳೆದ ನಾಲ್ಕು ವರ್ಷಗಳಿಂದ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಕಾಯಿಲೆಯಿಂದ ಬಳಲುತ್ತಿದ್ದು, ಮೂರು ದಿನಗಳ ಹಿಂದೆ ಇವರಿಗೆ ಕೆಮ್ಮು ಕಾಣಿಸಿಕೊಂಡಿತ್ತು. ಈ ಬಗ್ಗೆ ಕುಶಾಲನಗರದ ಖಾಸಗಿ ಕ್ಲಿನಿಕ್‍ನಲ್ಲಿ ತೋರಿಸಿದ್ದು, ಕೋವಿಡ್ ಪರೀಕ್ಷೆ ಮಾಡಿಸುವಂತೆ ಅಲ್ಲಿನ ವೈದ್ಯರು ಸಲಹೆ ಮಾಡಿದ್ದರು. ಮಂಗಳವಾರ ಅವರಿಗೆ ಕೆಮ್ಮು ಜಾಸ್ತಿಯಾಗಿದ್ದು, ಕುಶಾಲನಗರದ ಸರ್ಕಾರಿ ಆಸ್ಪತ್ರೆಗೆ ಹೋಗಿ ತೋರಿಸಿದ್ದಾರೆ. ಅಲ್ಲಿ ಇ.ಸಿ.ಜಿ ಪರೀಕ್ಷೆ ಮಾಡಿದಾಗ ಹೃದಯಘಾತವಾಗಿರುವುದು ಕಂಡು ಬಂದಿದ್ದು, ಕುಶಾಲನಗರ ಸರ್ಕಾರಿ ಆಸ್ಪತ್ರೆಯ ವೈದ್ಯರು ತಕ್ಷಣವೇ ಉನ್ನತ ಆಸ್ಪತ್ರೆಗೆ ತೆರಳುವಂತೆ ಸಲಹೆ ನೀಡಿದ್ದರು.
ಅದೇ ದಿನ ಸಂಜೆ 7.30 ಗಂಟೆಗೆ ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ಬಂದು ಮಹಿಳೆ ದಾಖಲಾಗಿದ್ದು, ತಕ್ಷಣವೇ ಅವರಿಗೆ ರ್ಯಾಪಿಡ್ ಆಂಟಿಜೆನ್ ಕಿಟ್ ಮೂಲಕ ಕೋವಿಡ್ ಪರೀಕ್ಷೆ ನಡೆಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ.
ಕೋವಿಡ್ ಸೋಂಕು ದೃಢಪಟ್ಟಿರುವುದರಿಂದ ಮತ್ತು ಅವರಿಗೆ ಹೃದಯಾಘಾತವಾಗಿದ್ದರಿಂದ ಅವರನ್ನು ಐ.ಸಿ.ಯು ಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತದರೂ ಬುಧವರ ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವಿಗೀಡಾಗಿದ್ದಾರೆ.
ಮತ್ತೊಂದೆಡೆ ವೀರಾಜಪೇಟೆ ತಾಲೂಕು ತಿತಿಮತಿಯ ಮರೂರು ನಿವಾಸಿ 36 ವರ್ಷದ ಪುರುಷರೊಬ್ಬರು ಈ ಹಿಂದಿನಿಂದಲೂ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ, ಹೃದಯ ಮತ್ತು ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದರೆನ್ನಲಾಗಿದ್ದು, ಆ.5ರಂದು ನೆಗಡಿ ಮತ್ತು ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಆ.7ರಂದು ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದಾಗ ಸೋಂಕು ದೃಢಪಟ್ಟಿತ್ತು.
ಆ.9ರಂದು ಅವರಿಗೆ ಬೇಧಿ ಪ್ರಾರಂಭವಾಗಿ ಸುಸ್ತು ಕಾಣಿಸಿಕೊಂಡಿದ್ದು, ಇವರಲ್ಲಿ ಆಮ್ಲಜನಕ ಪ್ರಮಾಣ ಕಡಿಮೆ ಇದ್ದುದರಿಂದ ಕೋವಿಡ್ ಐ.ಸಿ.ಯು ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಬುಧವಾರ ಬೆಳಗ್ಗೆ 11.30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸ್ಪಷ್ಟಪಡಿಸಿದ್ದಾರೆ.