ಮರ ಹಾಗೂ ಮರಳು ಮಾರಾಟಕ್ಕೆ ಅವಕಾಶ ನೀಡಲು ಶಾಸಕ ಕೆ.ಜಿ.ಬೋಪಯ್ಯ ಮನವಿ

20/08/2020

ಮಡಿಕೇರಿ ಆ.20 : ಕೊಡಗು ಜಿಲ್ಲೆಯಲ್ಲಿ ಆಗಸ್ಟ್ ಮೊದಲ ವಾರದಲ್ಲಿ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯಲ್ಲಿ ಭೂಕುಸಿತ ಹಾಗೂ ಪ್ರವಾಹ ಸಂಭವಿಸಿ ಸಾಕಷ್ಟು ನಷ್ಟ ಉಂಟಾಗಿದ್ದು, ರಾಜ್ಯ ಸರ್ಕಾರ ಅಗತ್ಯ ನೆರವು ನೀಡಬೇಕೆಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರಾದ ಕೆ.ಜಿ.ಬೋಪಯ್ಯ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಅವರು ಕೊಡಗು ಜಿಲ್ಲೆಯ ಇಂದಿನ ಪರಿಸ್ಥಿತಿಯನ್ನು ವಿವರಿಸಿದರು. ಭೂಕುಸಿತ ಮತ್ತು ಪ್ರವಾಹದಿಂದಾಗಿ ರಸ್ತೆ, ಸೇತುವೆಗಳ ಮೇಲೆ ಮರಗಳು ಬಿದ್ದಿದ್ದು, ರೋಸ್ ವುಡ್ ಹೊರತುಪಡಿಸಿ ಉಳಿದ ಮರಗಳನ್ನು ಮಾಲೀಕರೇ ಮಾರಾಟ ಮಾಡಲು ಅವಕಾಶ ನೀಡಬೇಕೆಂದು ಕೆ.ಜಿ.ಬೋಪಯ್ಯ ಕೋರಿಕೊಂಡರು.
ಪ್ರವಾಹದಿಂದ ಗದ್ದೆಗಳಲ್ಲೂ ಮರಳು ಮತ್ತು ಮಣ್ಣು ತುಂಬಿ ಹೋಗಿದ್ದು, ರಾಯಲ್ಟಿ ಪಾವತಿಸದೆ ಮರಳು ಮಾರಾಟಕ್ಕೆ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿಗಳ ಬಳಿ ಚರ್ಚಿಸಿದರು.
ಈ ಹಿಂದೆ ಕೊಡಗು ಪುನರ್ ನಿರ್ಮಾಣ ಪ್ರಾಧಿಕಾರಕ್ಕೆ 536 ಕೋಟಿ ರೂ. ಪ್ರಕಟಿಸಲಾಗಿತ್ತು, ಅದರಲ್ಲಿ ಈಗಾಗಲೇ 100 ಕೋಟಿ ರೂ. ಬಿಡುಗಡೆಯಾಗಿದೆ. ಬಾಕಿ ಹಣವನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ ಎಂದು ಕೆ.ಜಿ.ಬೋಪಯ್ಯ ಅವರು ತಿಳಿಸಿದ್ದಾರೆ.