ಭೂಕಾಯ್ದೆ ತಿದ್ದುಪಡಿ ವಿರುದ್ಧ ಕೊಡಗು ಜೆಡಿಎಸ್ ಪ್ರತಿಭಟನೆ : ಸರ್ಕಾರದ ಕ್ರಮಕ್ಕೆ ಖಂಡನೆ

21/08/2020

ಮಡಿಕೇರಿ ಆ. 21 : ರೈತರು ಹಾಗೂ ಕಾರ್ಮಿಕ ವರ್ಗಕ್ಕೆ ಮಾರಕವಾಗುವ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ರಾಜ್ಯ ಸರ್ಕಾರದ ನಿರ್ಧಾರದಿಂದ ಕೃಷಿ ಕ್ಷೇತ್ರ ಅಪಾಯವನ್ನು ಎದುರಿಸುತ್ತಿದೆ ಎಂದು ಆರೋಪಿಸಿ ಮತ್ತು ತಿದ್ದಪಡಿಯಾದ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಜಾತ್ಯತೀತ ಜನತಾದಳದ ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ಮೂಲಕ ಸಾಗಿದ ಜೆಡಿಎಸ್ ಪ್ರಮುಖರು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಬಿಜೆಪಿ ಸರ್ಕಾರ ಸುಗ್ರೀವಾಜ್ಞೆ ಮೂಲಕ ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ನಿಯಮಗಳಿಗೆ ತಿದ್ದುಪಡಿ ತಂದಿದ್ದು, ಇದು ರೈತ ವಿರೋಧಿ ನೀತಿಯಾಗಿದೆ ಎಂದು ಟೀಕಿಸಿದರು.
ಈ ಸಂದರ್ಭ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರು, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಕೃಷಿ ಕ್ಷೇತ್ರಕ್ಕೆ ದಕ್ಕೆ ತರುವ ನಿರ್ಧಾರಗಳನ್ನು ಕೈಗೊಂಡು ಶೋಷಣೆಯಲ್ಲಿ ತೊಡಗಿದೆ. ಬಂಡವಾಳಶಾಹಿಗಳಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ರೈತಾಪಿ ವರ್ಗದೊಂದಿಗೆ ಚರ್ಚಿಸದೆ ಸುಗ್ರೀವಾಜ್ಞೆಯ ಮೂಲಕ ಕಾಯ್ದೆಗಳಿಗೆ ತಿದ್ದುಪಡಿ ತರಲಾಗಿದೆ ಎಂದು ಆರೋಪಿಸಿದರು.
ಕಾರ್ಮಿಕ ವರ್ಗಕ್ಕೂ ಈ ಸರ್ಕಾರದಿಂದ ಅನ್ಯಾಯವಾಗುತ್ತಿದ್ದು, ರೈತರು ಹಾಗೂ ಕಾರ್ಮಿಕರ ಪರವಾಗಿ ಜೆಡಿಎಸ್ ನಿರಂತರ ಹೋರಾಟ ನಡೆಸಲಿದೆ ಎಂದರು.
ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ನಾಗರಾಜು ಮಾತನಾಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ರೈತರಿಗೆ ಮಾಡಿದ ದೊಡ್ಡ ದ್ರೋಹವಾಗಿದೆ ಎಂದು ಟೀಕಿಸಿದರು.
ರೈತರ ಪರ ಎಂದು ಹೇಳುತ್ತಲೇ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ರೈತ ವಿರೋಧಿ ಕಾನೂನು ಜಾರಿಯ ಹುನ್ನಾರ ನಡೆಸುತ್ತಿದೆ. ಯುವ ಸಮೂಹಕ್ಕೆ ಉದ್ಯೋಗ ಕಲ್ಪಿಸುವ ಭರವಸೆ ಹುಸಿಯಾಗಿದೆ ಎಂದು ಆರೋಪಿಸಿದರು.
ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್, ಯುವ ಘಟಕದ ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ, ಹಿರಿಯ ಉಪಾಧ್ಯಕ್ಷ ಯೂಸುಫ್ ಕೊಂಡಂಗೆರಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಇಬ್ರಾಹಿಂ, ವಿರಾಜಪೇಟೆ ಕ್ಷೇತ್ರ ಸಮಿತಿ ಅಧ್ಯಕ್ಷ ಎಸ್. ಹೆಚ್. ಮತೀನ್, ತಾಲೂಕು ಅಧ್ಯಕ್ಷ ಮಂಜುನಾಥ್, ಜಿಲ್ಲಾ ಕಾರ್ಯದರ್ಶಿ ಬಗ್ಗನ ಅನಿಲ್ ರಾಜೇಶ್, ಮುಳ್ಳುಸೋಗೆ ಪ.ಪಂ ಘಟಕ ಅಧ್ಯಕ್ಷÀ ರಾಮಚಂದ್ರ, ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಜಾಶಿರ್, ವಕ್ತಾರ ರವಿಕಿರಣ್, ಜಿನಾಶ್ ಯುವ ಉಪಾಧ್ಯಕ್ಷ ಶರತ್ ಹೆಬ್ಬಾಲೆ, ರವಿಕುಮಾರ್, ಮುನೀರ್ ಜಿಲ್ಲಾ ಖಜಾಂಜಿ ಡೆನ್ನಿ ಬರೋಸ್, ವಿರಾಜಪೇಟೆ ಅಲ್ಪಸಂಖ್ಯಾತ ಅಧ್ಯಕ್ಷ ಮಜೀದ್, ಮಡಿಕೇರಿ ನಗರ ಯುವ ಅಧ್ಯಕ್ಷ ಮೋನಿಷ್, ಮಡಿಕೇರಿ ನಗರ ಅಲ್ಪಸಂಖ್ಯಾತ ಅಧ್ಯಕ್ಷ ಖಾಲೀಲ್ ಬಾದ್‍ಷ, ಮಹಿಳಾ ಕಾರ್ಯದರ್ಶಿ ಲೀಲಾಶೇಷಮ್ಮ, ಪೆÇನ್ನಪೇಟೆ ತಾಲೂಕು ಮಹಿಳಾ ಅಧ್ಯಕ್ಷೆ ಕುಸುಮ ಚಂದ್ರಶೇಖರ್, ಮಡಿಕೇರಿ ಮಹಿಳಾ ಅಧ್ಯಕ್ಷೆ ಸುನಂದಾ, ಉಪಾಧ್ಯಕ್ಷರಾದ ಮಮತ, ಯುವ ಘಟಕದ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಅಭಿತ್ ಅಪ್ಪಯ್ಯ, ಸೋಮವಾರಪೇಟೆ ತಾಲೂಕು ಯುವ ಅಧ್ಯಕ್ಷ ರವಿ ಹಾಗೂ ಪ್ರಮುಖರಾದ ಬೋಳಿಯಂಡ ಗಣೇಶ್, ರಘು, ತ್ರಿಶೂಲ್ ಕಾರ್ಯಪ್ಪ, ಶಬ್ಬೀರ್, ಸೈಫ್, ಯಹಿಯ ಎಡಪಲ, ಅಮ್ಮತಿ ಜಯಮ್ಮ, ಕುಯ್ಮಂಡ ರಾಕೇಶ್ ಬಿದ್ದಪ್ಪ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ ಅವರ ಮೂಲಕ ಪ್ರತಿಭಟನಾಕಾರರು ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.