ಆರೋಗ್ಯಾಧಿಕಾರಿ ಸಾವಿನ ಕುರಿತು ತನಿಖೆಗೆ ಆಗ್ರಹ : ಮಡಿಕೇರಿಯಲ್ಲಿ ಆರೋಗ್ಯ ಸಿಬ್ಬಂದಿಗಳ ಮುಷ್ಕರ

21/08/2020

ಮಡಿಕೇರಿ ಆ.21 : ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಅವರ ಸಾವಿನ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಗುತ್ತಿಗೆ, ಹೊರ ಹುತ್ತಿಗೆ ನೌಕರರ ಸಂಘ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿ ಮಹೇಶ್ ಅವರಿಗೆ ಮನವಿ ಪತ್ರ ಸಲ್ಲಿಸಿತು.
ಸಿಬ್ಬಂದಿಗಳು ಘಟನೆಯನ್ನು ಖಂಡಿಸಿ ತುರ್ತು ಸೇವೆಯನ್ನು ಹೊರತುಪಡಿಸಿ ವೈದ್ಯಕೀಯ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಿದರು. ಕಪ್ಪುಪಟ್ಟಿಯನ್ನು ಧರಿಸಿ ಮುಷ್ಕರ ನಡೆಸುವ ಮೂಲಕ ಆರೋಗ್ಯಾಧಿಕಾರಿ ಸಾವಿಗೆ ಬೇಸರ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಮಹದೇವಪ್ಪ ಅವರು ಕಾರ್ಯದ ಒತ್ತಡದಿಂದ ಆರೋಗ್ಯಾಧಿಕಾರಿ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಸಂಶಯವಿದೆ ಎಂದು ಆರೋಪಿಸಿದರು.
ಪ್ರಕರಣದ ಬಗ್ಗೆ ಸರ್ಕಾರ ಸೂಕ್ತ ತನಿಖೆ ನಡೆಸಿ ನಾಗೇಂದ್ರ ಅವರ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಒತ್ತಾಯಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ರಘು, ಖಜಾಂಚಿ ದಿವಾಕರ್, ಕೆಜಿಎಂ ಪದಾಧಿಕಾರಿಗಳಾದ ಡಾ.ಎನ್.ಆನಂದ್, ಡಾ.ಎಸ್.ಗೋಪಿನಾಥ್ ಹಾಗೂ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸುವ ಸಂದರ್ಭ ಹಾಜರಿದ್ದರು.