ಅಧ್ಯಕ್ಷರಾಗಿ ಸೋನಿಯಾ ಮುಂದುವರಿಕೆ

25/08/2020

ನವದೆಹಲಿ ಆ.25 : ಸೋಮವಾರ ಸುಮಾರು ಏಳು ಗಂಟೆಗಳ ಕಾಲ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ) ಸಭೆಯಲ್ಲಿ ಅಂತಿಮವಾಗಿ ಹಂಗಾಮಿ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನೇ ಮುಂದುವರೆಸಲು ನಿರ್ಧರಿಸಲಾಗಿದ್ದು, ಮುಂದಿನ ಆರು ತಿಂಗಳ ನಂತರ ಪಕ್ಷಕ್ಕೆ ಹೊಸ ಅಧ್ಯಕ್ಷರ ನೇಮಕ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.
ಇಂದು ನಡೆದ ಕಾಂಗ್ರೆಸ್ ಸಿಡಬ್ಲ್ಯೂಸಿ ಸಭೆ ಹಲವು ನಾಟಕೀಯ ಪ್ರಸಂಗಗಳಿಗೆ ಸಾಕ್ಷಿಯಾಯಿತು. ಕಾಂಗ್ರೆಸ್ ನಾಯಕತ್ವದಲ್ಲಿ ಬದಲಾವಣೆಯಾಗುವುದು ಅಗತ್ಯ ಇದೆ ಎಂದು ಗುಲಾಂ ನಬಿ ಆಜಾದ್, ಕಪಿಲ್ ಸಿಬಲ್ ಸೇರಿದಂತೆ 23 ಹಿರಿಯ ಕಾಂಗ್ರೆಸ್ಸಿಗರು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದ ವಿಚಾರ ಈ ಸಭೆಯಲ್ಲಿ ಬಹಳಷ್ಟು ಚರ್ಚೆಯಾಗಿದೆ.
ಮುಂದಿನ ಸಿಡಬ್ಲ್ಯೂಸಿ ಸಭೆಯಲ್ಲಿ ನೂತನ ಅಧ್ಯಕ್ಷರನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಅಲ್ಲಿಯವರೆಗೂ ಸೋನಿಯಾ ಅವರೇ ಹಂಗಾಮಿಯಾಗಿ ಮುಂದುವರಿಯಲಿದ್ದಾರೆ ಎನ್ನಲಾಗಿದೆ.
ಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ಕಾಂಗ್ರೆಸ್ ದೊಡ್ಡ ಕುಟುಂಬವಿದ್ದಂತೆ. ತನಗೆ ಯಾರ ವಿರುದ್ಧವೂ ದ್ವೇಷ ಇಲ್ಲ. ಆದರೆ, ಪಕ್ಷದ ವೇದಿಕೆಯಲ್ಲಿ ಮಾತ್ರ ಅಭಿಪ್ರಾಯ ವ್ಯಕ್ತಪಡಿಸಿ ಎಂದು ಹಿರಿಯ ನಾಯಕರಿಗೆ ಸಲಹೆ ನೀಡಿದ್ದಾರೆ.