ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ

August 25, 2020

ಬೆಂಗಳೂರು ಆ.25 : ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುವಲ್ಲಿ ಕರ್ನಾಟಕವೇ ಮೊದಲಿಗನಾಗಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಅವರು ಸೋಮವಾರ ಹೇಳಿದ್ದಾರೆ.
ಇಂದು ಬೆಂಗಳೂರು ವಿಶ್ವವಿದ್ಯಾಲಯ ಹಮ್ಮಿಕೊಂಡಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯ ಮುಖ್ಯಾಂಶಗಳು ಮತ್ತು ಜಾರಿ ಕುರಿತ ಐದು ದಿನಗಳ ಆನ್ ಲೈನ್ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಅಶ್ವತ್ಥನಾರಾಯಣ ಅವರು, ರಾಜ್ಯ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬೇಕಿರುವ ಎಲ್ಲಾ ಆಡಳಿತಾತ್ಮಕ ಸುಧಾರಣೆಗಳು ಹಾಗೂ ಕಾನೂನು ತಿದ್ದುಪಡಿಗಳ ಬಗ್ಗೆ ತಯಾರಿ ಮಾಡಿಕೊಳ್ಳುತ್ತಿದೆ ಎಂದರು.
ನಿರ್ದಿಷ್ಟ ಗುರಿ ಮತ್ತು ಸ್ಪಷ್ಟ ಕಾರ್ಯಸೂಚಿಯ ಮೂಲಕ ಸರ್ಕಾರ ಎಲ್ಲಾ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಇಡೀ ದೇಶದಲ್ಲೇ ಮೊತ್ತ ಮೊದಲ ಬಾರಿಗೆ ಜಾರಿಗೊಳಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಲಿದೆ ಎಂದು ಡಿಸಿಎಂ ಹೇಳಿದರು.