ಸೆ.19 ರಂದು ಮೆಗಾ ಇ-ಲೋಕ ಅದಾಲತ್ : ದೇಶದಲ್ಲೇ ಮೊದಲು

ಮಡಿಕೇರಿ ಆ.28 : ದೇಶದಲ್ಲಿಯೇ ಮೊದಲ ಬಾರಿಗೆ ಸೆ.19 ರಂದು ಎಲ್ಲಾ ನ್ಯಾಯಾಲಯಗಳ ಮೂಲಕ ಮೆಗಾ ಇ-ಲೋಕ ಅದಾಲತ್ ನಡೆಯಲಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ಅರವಿಂದ್ ಕುಮಾರ್ ಅವರು ತಿಳಿಸಿದರು.
ಬೆಂಗಳೂರಿನ ಹೈಕೋರ್ಟ್ ಸಭಾಂಗಣದಿಂದ ಶುಕ್ರವಾರ ಎಲ್ಲಾ ಜಿಲ್ಲೆಗಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಪತ್ರಕರ್ತರೊಂದಿಗೆ ಏರ್ಪಡಿಸಿದ್ದ ಸಂವಾದದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೇಶದಲ್ಲಿಯೇ ಇದೇ ಮೊದಲ ಬಾರಿಗೆ ಮೆಗಾ ಇ-ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ರಾಜಿ ಸಂಧಾನದ ಮೂಲಕ ಬಗೆಹರಿಸಬಹುದಾದ ಪ್ರಕರಣಗಳನ್ನು ಇ-ಲೋಕ ಅದಾಲತ್ ಮುಖೇನ ಅರ್ಜಿದಾರರು ವಿಲೇವಾರಿ ಮಾಡಿಕೊಳ್ಳಬಹುದಾಗಿದೆ ಎಂದು ಅವರು ಹೇಳಿದರು.
ಅಲ್ಲದೆ ಸರ್ವರಿಗೂ ನ್ಯಾಯ ಒದಗಿಸುವುದು ನ್ಯಾಯಾಲಯಗಳ ಉದ್ದೇಶವಾಗಿದೆ. ಜಾತಿ, ಮತ, ಧರ್ಮಗಳ ಬೇಧವಿಲ್ಲದೆ ಸರ್ವರಿಗೂ ಶೀಘ್ರ ನ್ಯಾಯ ಒದಗಿಸುವ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ವೀಡಿಯೋ ಸಂವಾದದಲ್ಲಿ ಭಾಗಿಯಾಗಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ ಅವರು ಕೋವಿಡ್-19 ಹಿನ್ನೆಲೆಯಲ್ಲಿ ಅರ್ಜಿದಾರರು ನ್ಯಾಯಾಲಯಗಳಿಗೆ ಬರಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಕೆಲ ಪ್ರಕರಣಗಳ ಇತ್ಯರ್ಥಕ್ಕೂ ತೊಡಕುಂಟಾದಂತಾಗಿದೆ. ಈ ನಿಟ್ಟಿನಲ್ಲಿ ಮೆಗಾ ಇ-ಲೋಕ ಅದಾಲತ್ ನಡೆಸಿ ರಾಜಿ ಪ್ರಕರಣಗಳಲ್ಲಿ ಶೀಘ್ರವೇ ನ್ಯಾಯದಾನ ಮಾಡಬಹುದಾಗಿದೆ ಎಂದು ಅವರು ತಿಳಿಸಿದರು.
ಅಲ್ಲದೇ ಅರ್ಜಿದಾರರು ನ್ಯಾಯಲಯಕ್ಕೆ ಬರುವ ಅವಶ್ಯಕತೆಯಿಲ್ಲ. ಬದಲಿಗೆ ತಮ್ಮ ವಕೀಲರ ಮೂಲಕ ಮೆಗಾ ಇ-ಲೋಕ ಅದಾಲತ್‍ನಲ್ಲಿ ಅರ್ಜಿ ಸಲ್ಲಿಸಿ ಭಾಗಿಯಾಗಿ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಅಗತ್ಯ ಸಂದರ್ಭಗಳಲ್ಲಿ ವಿಡಿಯೊ ಕಾನ್ಫರೆನ್ಸ್ ಮುಖೇನ ಪ್ರಕರಣಗಳನ್ನು ಪರಿಹರಿಸಬಹುದಾಗಿದೆ ಎಂದು ಅವರು ಹೇಳಿದರು.
ಲೇವಾದೇವೆ, ಕೌಟುಂಬಿಕ ಪ್ರಕರಣ, ವಾಹನ ಅಪಘಾತ ಸಂಬಂಧಿಸಿದಂತೆ ವಿಮೆ ಹಣ ನೀಡುವ ಪ್ರಕರಣಗಳು ಸೇರಿದಂತೆ ರಾಜಿ ಸಂಧಾನದ ಪ್ರಕರಣಗಳನ್ನು ಇತ್ಯರ್ಥ ಪಡಿಸಬಹುದಾಗಿದೆ ಎಂದು ಅವರು ತಿಳಿಸಿದರು.
ಅಲ್ಲದೇ ಮೆಗಾ ಇ-ಲೋಕ ಅದಾಲತ್ ಕೆಲ ವ್ಯಾಜ್ಯಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಒಂದು ಉತ್ತಮ ಅವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ ಅವರು ತಿಳಿಸಿದರು.