ಸೆ. 7 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

01/09/2020

ಮಡಿಕೇರಿ ಸೆ. 1 : ಸೆಪ್ಟೆಂಬರ್ 07 ರಿಂದ ಸೆ.19 ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ಯಾವುದೇ ಲೋಪ-ದೋಷವಿಲ್ಲದಂತೆ ವ್ಯವಸ್ಥಿತ ರೀತಿಯಲ್ಲಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಪಿಯುಸಿ ಪೂರಕ ಪರೀಕ್ಷೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು.
ಕೋವಿಡ್-19 ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಸೂಕ್ತ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ವಿದ್ಯಾರ್ಥಿಗೆ ಕೋವಿಡ್-19 ಪಾಸಿಟಿವ್ ಬಂದಲ್ಲಿ ಇಲಾಖಾ ಮಾರ್ಗಸೂಚಿಯಂತೆ ಕ್ರಮವಹಿಸಿ. ಸೋಂಕು ದೃಢಪಟ್ಟ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪದವಿ ಪೂರ್ವ ಶಿಕ್ಷಣ ಇಲಾಖೆಯು ಅನುಮತಿ ನೀಡಿದರೆ, ಅಂತಹ ವಿದ್ಯಾರ್ಥಿಗಳಿಗೆ ನಗರದ ನವೋದಯ ಶಾಲೆಯಲ್ಲಿ ಪ್ರತ್ಯೇಕ ಪರೀಕ್ಷಾ ಕೇಂದ್ರವನ್ನು ಸಿದ್ದಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಅಲ್ಲದೆ ಕಂಟೈನ್‍ಮೆಂಟ್ ವಲಯದಿಂದ ಬರುವ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಕಂಟೈನ್‍ಮೆಂಟ್ ವಲಯದಿಂದ ಹೊರಬರಬಹುದಾಗಿದೆ. ಈ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಿ ಪರೀಕ್ಷೆ ಬರೆಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚನೆ ನೀಡಿದರು.
ಪದವಿಪೂರ್ವ ಶಿಕ್ಷಣ ಇಲಾಖೆಯ ಪ್ರಭಾರ ಉಪನಿರ್ದೇಶಕರಾದ ಪಿ.ಎಸ್ ಜಾನ್ ಅವರು ಮಾತನಾಡಿ ಸೆಪ್ಟೆಂಬರ್, 07 ರಿಂದ ಸೆಪ್ಟೆಂಬರ್ 19 ರ ವರೆಗೆ ಪರೀಕ್ಷೆ ನಡೆಯಲಿದ್ದು, ಬೆಳಗಿನ ಅವಧಿಯು 10.15 ರಿಂದ 1.30 ಗಂಟೆಯವರೆಗೆ ಮತ್ತು ಮಧ್ಯಾಹ್ನ 2.15 ರಿಂದ 5.30 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ಜಿಲ್ಲೆಯಲ್ಲಿ 3 ಪರೀಕ್ಷಾ ಕೇಂದ್ರಗಳಿದ್ದು ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆಯಲ್ಲಿ ತಲಾ 1 ಪರೀಕ್ಷಾ ಕೇಂದ್ರಗಳಿವೆ. ಒಟ್ಟಾರೆ 1200 ವಿದ್ಯಾರ್ಥಿಗಳು ವಿವಿಧ ವಿಷಯಗಳ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಸಿದ್ದಾರೆ ಎಂದು ಅವರು ತಿಳಿಸಿದರು.
ಮಡಿಕೇರಿಯಲ್ಲಿ 275, ವಿರಾಜಪೇಟೆಯಲ್ಲಿ 423 ಮತ್ತು ಸೋಮವಾರಪೇಟೆ ಪರೀಕ್ಷಾ ಕೇಂದ್ರದಲ್ಲಿ 469 ವಿದ್ಯಾರ್ಥಿಗಳು ಸೇರಿ 1167 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸೆ.07 ರಂದು ಮಾತ್ರವೇ ಸೋಮವಾರಪೇಟೆ ಪರೀಕ್ಷಾ ಕೇಂದ್ರದಲ್ಲಿ 3 ವಿದ್ಯಾರ್ಥಿಗಳು ಮಧ್ಯಾಹ್ನದ ಅವಧಿಯ ಪರೀಕ್ಷೆಯನ್ನು ಬರೆಯಲಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಪ್ರಭಾರ ಉಪನಿರ್ದೇಶಕರಾದ ಜಾನ್ ಅವರು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾತನಾಡಿ ಈಗಾಗಲೇ ಎಸ್‍ಎಸ್‍ಎಲ್‍ಸಿ, ಪಿಯುಸಿ ವಾರ್ಷಿಕ ಪರೀಕ್ಷೆ ಮತ್ತು ಸಿಇಟಿ ಪರೀಕ್ಷೆಯನ್ನು ಜಿಲ್ಲೆಯಲ್ಲಿ ವ್ಯವಸ್ಥಿತ ರೀತಿಯಲ್ಲಿ ನಡೆಸಲಾಗಿದೆ. ಇದೀಗ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನೂ ಸಹ ಸೂಕ್ತ ರೀತಿಯಲ್ಲಿ ನಡೆಸಬೇಕು. ಪರೀಕ್ಷೆಯ ನಂತರ ಪ್ರತಿ ಪರೀಕ್ಷಾ ಕೇಂದ್ರವನ್ನು ಸ್ಯಾನಿಟೈಸ್ ಮಾಡಿಸಬೇಕು. ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚನೆ ನೀಡಬೇಕು. ಅಲ್ಲದೆ ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಎಲ್ಲಾ ವಿದ್ಯಾರ್ಥಿಗಳಿಗೂ ಥರ್ಮಲ್ ಸ್ಕ್ರೀನಿಂಗ್ ನಡೆಸಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಬೇಕು. ಅಲ್ಲದೇ ಸಿಸಿಟಿವಿಗಳು ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆಯೆ ಎಂಬ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ ಮತ್ತು ವಿರಾಜಪೇಟೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜ್ಯೋತಿ ಅವರು ಮಾತನಾಡಿ ಸಂಬಂಧಪಟ್ಟ ತಹಶೀಲ್ದಾರರ ಮುಖೇನ ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸರ್ ವ್ಯವಸ್ಥೆ ಮಾಡಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸಂಬಂಧಪಟ್ಟ ತಹಶೀಲ್ದಾರರಿಗೆ ಅಗತ್ಯ ಸ್ಯಾನಿಟೈಸರ್ ಒದಗಿಸುವಂತೆ ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಜಿಲ್ಲಾ ಖಜಾನಾಧಿಕಾರಿ ಪದ್ಮಜಾ, ನಗರಸಭೆ ಪೌರಾಯುಕ್ತರಾದ ರಾಮ್‍ದಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ವೃತ್ತ ನಿರೀಕ್ಷಕರಾದ ಮೇದಪ್ಪ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ರೇಷ್ಮ, ಮಡಿಕೇರಿ ತಹಶೀಲ್ದಾರರಾದ ಮಹೇಶ್, ಪ್ರಾಂಶುಪಾಲರಾದ ಬೆಳ್ಳಿಯಪ್ಪ ಇತರರು ಇದ್ದರು.