ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ : ಜಿಲ್ಲಾಧಿಕಾರಿ ಸೂಚನೆ

09/09/2020

ಮಡಿಕೇರಿ ಸೆ. 9 : ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮವನ್ನು ಸೂಕ್ತ ರೀತಿಯಲ್ಲಿ ಅನುಷ್ಠಾನಗೊಳಿಸಿ ಉತ್ತಮ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ ಮತ್ತು ಲಸಿಕಾ ಕಾರ್ಯಪಡೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಕ್ಕಳ ಆರೋಗ್ಯ ವೃದ್ಧಿ ಸಂಬಂಧ ಜಂತು ಹುಳು ಮಾತ್ರೆಗಳ ಸೇವನೆ ಉತ್ತಮವಾಗಿದೆ. ಈ ಸಂಬಂಧ ಸೆಪ್ಟೆಂಬರ್, 07 ರಿಂದ ಸೆ.21 ರವರೆಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ಶಾಲೆ ಕಾಲೇಜು ಮತ್ತು ಅಂಗನವಾಡಿಗಳು ತೆರೆದಿರುವುದಿಲ್ಲ. ಈ ನಿಟ್ಟಿನಲ್ಲಿ ಅಂಗನವಾಡಿ, ಆಶಾ ಮತ್ತು ಶಾಲಾ ಶಿಕ್ಷಕರನ್ನು ಬಳಸಿಕೊಂಡು ಪ್ರತಿಯೊಂದು ಮಗುವಿಗೂ ಜಂತುಹುಳು ನಿವಾರಣಾ ಮಾತ್ರೆಗಳನ್ನು ನೀಡಲು ಕ್ರಮವಹಿಸುವಂತೆ ಅನೀಸ್ ಕಣ್ಮಣಿ ಜಾಯ್ ಅವರು ಹೇಳಿದರು.
ಆಶಾ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಶಿಕ್ಷಕರು ಈ ಬಾರಿ ಮನೆಗಳಿಗೆ ತೆರಳಿ 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಜಂತುಹುಳು ಮಾತ್ರೆಗಳನ್ನು ಪೋಷಕರ ಸಮ್ಮುಖದಲ್ಲಿ ನೀಡಿ ಮಕ್ಕಳು ಮಾತ್ರೆಯನ್ನು ಸೇವಿಸುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭ ಮಾತನಾಡಿದ ಆರ್‍ಸಿಎಚ್ ಅಧಿಕಾರಿ ಡಾ.ಗೋಪಿನಾಥ್ ಅವರು ಈಗಾಗಲೇ ಜಿಲ್ಲೆಯಲ್ಲಿ 1,37,768 ಮಕ್ಕಳಿದ್ದು, ಈಗಾಗಲೇ ಮಾತ್ರೆಗಳ ವಿತರಣಾ ಕಾರ್ಯ ಆರಂಭವಾಗಿದ್ದು, ಶೀಘ್ರದಲ್ಲಿಯೇ ಯಶಸ್ವಿಯಾಗಿ ಕಾರ್ಯಕ್ರಮವನ್ನು ನಿರ್ವಹಿಸಲಿದ್ದೇವೆ ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾತನಾಡಿ ಜಿಲ್ಲೆಯಲ್ಲಿ ಲಸಿಕಾ ಕಾರ್ಯಕ್ರಮವನ್ನು ಕ್ಷಿಪ್ರಗತಿಯಲ್ಲಿ ನಡೆಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಲಸಿಕೆಗಳು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಮರ್ಪಕ ರೀತಿಯಲ್ಲಿ ಲಸಿಕಾ ಕಾರ್ಯಕ್ರಮವನ್ನು ಕೈಗೊಳ್ಳಬೇಕು ಎಂದು ಅವರು ಸೂಚನೆ ನಿಡಿದರು.
ಅಲ್ಲದೆ ಶಾಲಾ ಶಿಕ್ಷಕರು ವಿದ್ಯಾರ್ಥಿಗಳನ್ನು ಸಮೀಪದ ಆರೋಗ್ಯ ಕೇಂದ್ರಗಳಿಗೆ ಕರೆತಂದು ಲಸಿಕೆ ಕೊಡಿಸುವ ಕಾರ್ಯವನ್ನು ಮಾಡಲು ಕ್ರಮವಹಿಸುವಂತೆ ಸಂಬಂಧಪಟ್ಟ ವೈದ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಅವರು ಜಿಲ್ಲಾ ಕ್ಷಯರೋಗ ನಿವಾರಣೆ ಕಾರ್ಯಕ್ರಮ ಸಂಬಂಧ ಜಿಲ್ಲಾಧಿಕಾರಿ ಅವರಿಗೆ ಮಾಹಿತಿ ನೀಡಿದರು. ಅಲ್ಲದೇ ಈ ವೇಳೆ ಕ್ಷಯ ರೋಗ ನಿರ್ಮೂಲನೆ ಪ್ರತಿಜ್ಞೆಯನ್ನು ಡಾ. ಆನಂದ್ ಅವರು ಬೋಧಿಸಿದರು. ಈ ಸಂದರ್ಭ ಅಧಿಕಾರಿಗಳು ಮತ್ತ ಇತರರು ಕ್ಷಯರೋಗ ನಿರ್ಮೂಲನೆ ಪ್ರತಿಜೆ ಸ್ವೀಕಾರ ಮಾಡಿದರು.
ಕೊಡಗು ಜಿಲ್ಲೆ ಕರ್ನಾಟಕ ರಾಜ್ಯ 2025 ನೇ ಸಾಲಿಗೆ ಭಾರತದಿಂದ ಕ್ಷಯ ರೋಗವನ್ನು ನಿರ್ಮೂಲನೆಗೊಳಿಸಲು ಪ್ರಜ್ಞಾ ಪೂರ್ವಕವಾಗಿ ಭಾರತ ಸರ್ಕಾರದ ಧ್ಯೇಯವನ್ನು ಬೆಂಬಲಿಸುತ್ತಾ ನನ್ನ ಕುಟುಂಬ, ನನ್ನ ಸಹೋದ್ಯೋಗಿಗಳು ಮತ್ತು ನಮ್ಮ ಸುತ್ತಮುತ್ತಲಿನ ನೆರೆ ಹೊರೆಯವರನ್ನು ಕ್ಷಯ ರೋಗದಿಂದ ರಕ್ಷಿಸಲು, ನನ್ನ ರೋಗಿಗಳಿಗೆ ಕ್ಷಯ ರೋಗದ ವಿರುದ್ಧ ಹೋರಾಡಲು ಅಗತ್ಯ ಕ್ರಮವನ್ನು ನೀಡುವುದಾಗಿ ನನ್ನ ನೆರೆಹೊರೆ, ನನ್ನ ಗ್ರಾಮ, ನನ್ನ ತಾಲೂಕು, ನನ್ನ ಜಿಲೆ,್ಲ ನನ್ನ ರಾಜ್ಯ, ನನ್ನ ದೇಶವನ್ನು ಕ್ಷಯ ರೋಗದಿಂದ ನಿರ್ಮೂಲನೆ ಮಾಡುತ್ತೇನೆಂದು ಪ್ರತಿಜ್ಞೆ ಮಾಡಲಾಯಿತು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಅವರು ಕ್ಷಯ ರೋಗಿಗಳಿಗೆ ಸರ್ಕಾರ ನೀಡುವ ಸವಲತ್ತು ಸಮರ್ಪಕ ರೀತಿಯಲ್ಲಿ ತಲುಪಬೇಕು. ಈ ಬಗ್ಗೆ ಏನಾದರೂ ಗೊಂದಲಗಳಿದ್ದರೆ ಅದನ್ನು ಬಗೆಹರಿಸಿಕೊಳ್ಳಬೇಕು ಎಂದು ಅವರು ಸೂಚಿಸಿದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಅವರು ಮಾತನಾಡಿ, ಜನವರಿಯಿಂದ ಆಗಸ್ಟ್ ಮಾಹೆಯ ವರೆಗೆ ಜಿಲ್ಲೆಯಲ್ಲಿ 249 ಸಕ್ರೀಯ ಕ್ಷಯ ರೋಗ ಪ್ರಕರಣಗಳಿದ್ದು, ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದರು. ಅಲ್ಲದೆ ಕೆಲವು ಆದಿವಾಸಿಗಳಿಗೆ ಆಧಾರ್ ಕಾರ್ಡ್ ಮತ್ತು ರಾಷ್ಟ್ರೀಕೃತ ಬ್ಯಾಂಕ್ ಖಾತೆಗಳಿಲ್ಲದೇ ಇರುವುದರಿಂದ ಸರ್ಕಾರದಿಂದ ಕೊಡುವ 500 ರೂ.ಗಳನ್ನು ತಲುಪಿಸಲಾಗುತ್ತಿಲ್ಲ ಎಂದು ಹೇಳಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅವರು ಸರ್ಕಾರದಿಂದ ಕೊಡುವ ಹಣವು ದುರುಪಯೋಗವಾಗದಂತೆ ಕ್ರಮ ವಹಿಸಿ. ಜೊತೆಗೆ ಬ್ಯಾಂಕ್ ಖಾತೆಗಳಿಲ್ಲದೇ ಇರುವವರು ಮತ್ತು ಆಧಾರ್ ಕಾರ್ಡ್ ಸಮಸ್ಯೆ ಇರುವವರಿಗೆ ಪರ್ಯಾಯ ವ್ಯವಸ್ಥೆ ಮಾಡುವ ಅಥವಾ ಬ್ಯಾಂಕ್ ಖಾತೆಗಳನ್ನು ತೆರೆಯುವ ಬಗ್ಗೆ ಕ್ರಮ ವಹಿಸುವಂತೆ ಸೂಚಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್ ಅವರು ಮಾತನಾಡಿ ಕುಶಾಲನಗರ ಸಮುದಯ ಆರೋಗ್ಯ ಕೇಂದ್ರದ ಬಗ್ಗೆ ಪದೇ ಪದೇ ದೂರುಗಳು ಕೇಳಿ ಬರುತ್ತಿದ್ದವು. ಈ ನಿಟ್ಟಿನಲ್ಲಿ ಖುದ್ದು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಜನ ಸಾಮಾನ್ಯರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ಸೂಚನೆ ನೀಡಿರುವುದಾಗಿ ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದರು.
ಕೋವಿಡ್-19 ಪರೀಕ್ಷೆ ಸಂಬಂಧ ಹೆಚ್ಚಿನ ನಿಗಾ ವಹಿಸಿ. ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿರುವವರನ್ನು ಹಾಗೂ ಕಂಟೈನ್‍ಮೆಂಟ್ ವಲಯದಲ್ಲಿನ ಜನರ ಪರೀಕ್ಷೆಗೆ ಕ್ರಮಕೈಗೊಳ್ಳಿ. ಸಾರ್ವಜನಿಕರು ಅಸಹಕಾರ ತೋರಿದ ಸಂದರ್ಭ ಸ್ಥಳೀಯ ಜನಪ್ರತಿನಿಧಿಗಳ ನೆರವು ಪಡೆಯುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಈ ಸಂದರ್ಭ ಮಾತನಾಡಿದ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅಪ್ಪಂಡೇರಂಡ ಭವ್ಯ ಅವರು ಕೋವಿಡ್-19 ಪರೀಕ್ಷೆ ಸಂಬಂಧ ಜನಪ್ರತಿನಿಧಿಗಳು ಆರೋಗ್ಯ ಇಲಾಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥರಾದ ಡಾ.ರಾಮಚಂದ್ರ ಕಾಮತ್, ಸಹ ಪ್ರಾಧ್ಯಾಪಕರಾದ ಡಾ.ಎಸ್.ಎಚ್.ಮಹೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಅರುಂಧತಿ, ಮಕ್ಕಳ ತಜ್ಞರಾದ ಡಾ.ಕೃಷ್ಣಾನಂದ, ಡಾ.ಸೋಮಶೇಖರ್, ತಾಲೂಕು ವೈದ್ಯಾಧಿಕಾರಿಗಳು, ಶುಶ್ರೂಷಕಿಯರು ಇತರರು ಇದ್ದರು.