ಕೊಡಗಿನಲ್ಲಿ ಕೋವಿಡ್ ನಿಯಂತ್ರಣ ಮತ್ತು ಮಳೆ ಹಾನಿ ಬಗ್ಗೆ ಮಾಹಿತಿ ಪಡೆದ ಸಿಎಂ

September 10, 2020

ಮಡಿಕೇರಿ ಸೆ.10 : ರಾಜ್ಯಾದ್ಯಂತ ಕೋವಿಡ್-19 ಸೋಂಕು ಹರಡುವಿಕೆ ಪ್ರಮಾಣ ಕಡಿಮೆ ಮಾಡಲು ಮತ್ತು ಕೋವಿಡ್ ಮರಣ ಪ್ರಕರಣಗಳ ಪ್ರಮಾಣ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸೂಚನೆ ನೀಡಿದ್ದಾರೆ.
ಬೆಂಗಳೂರಿನಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಗುರುವಾರ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಕೋವಿಡ್-19 ನಿಯಂತ್ರಣ ಹಾಗೂ ಮಳೆ ಹಾನಿ ಸಂಬಂಧ ಸಭೆ ನಡೆಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿದರು.
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿವೆ. ಅಲ್ಲದೆ ಜಿಲ್ಲಾಡಳಿತ ಸೋಂಕು ನಿಯಂತ್ರಿಸುವ ಸಲುವಾಗಿ ಹಗಲಿರುಳು ಶ್ರಮ ವಹಿಸುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಕಾರ್ಯ ವೈಖರಿ ಬಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಈಗಾಗಲೇ ಅನ್‍ಲಾಕ್ ಪ್ರಕ್ರಿಯೆಯಿಂದ ಆರ್ಥಿಕ ಚಟುವಟಿಕೆ ಆರಂಭಿಸಲಾಗಿದೆ. ಕೋವಿಡ್-19 ಜೊತೆಗೆ ಬದುಕು ನಡೆಸುವ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕಾರ್ಯನಿರ್ವಹಿಸಬೇಕು. ಕೋವಿಡ್-19 ನಿಂದ ಉಂಟಾಗುತ್ತಿರುವ ಮರಣ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಶ್ರಮವಹಿಸಿ ಎಂದು ಮುಖ್ಯಮಂತ್ರಿ ಅವರು ರಾಜ್ಯದ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಲ್ಲದೇ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಪ್ರವಾಹ ನಿರ್ವಹಣೆ ಸಂಬಂಧ ಹೆಚ್ಚಿನ ಮುತುವರ್ಜಿಯಿಂದ ಕೆಲಸ ನಿರ್ವಹಿಸಿ. ಮಳೆಯಿಂದ ಮನೆ, ಜೀವ ಹಾನಿ ಸಂಭವಿಸಿದ್ದಲ್ಲಿ ನಿಯಮಾನುಸಾರ ಪರಿಹಾರ ನೀಡಿ. ಈಗಾಗಲೇ ಜಿಲ್ಲಾಧಿಕಾರಿಗಳ ಪಿಡಿ ಖಾತೆಗೆ ಹಣ ಬಿಡುಗಡೆ ಮಾಡಲಾಗಿದ್ದು, ಪರಿಹಾರ, ರಸ್ತೆ ಸೇತುವೆ ಮುಂತಾದವುಗಳ ದುರಸ್ತಿ ಮತ್ತು ಮರುನಿರ್ಮಾಣ ಕಾರ್ಯವನ್ನು ಕ್ಷಿಪ್ರಗತಿಯಲ್ಲಿ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚಿಸಿದರು.
ಈ ಸಂದರ್ಭ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಸುಧಾಕರ್ ಅವರು ಪ್ರತಿ ಜಿಲ್ಲೆಯಲ್ಲಿಯು ಕೋವಿಡ್-19 ಪರೀಕ್ಷೆ ಹೆಚ್ಚಿಸಬೇಕು. ಆಶಾ ಕಾರ್ಯಕರ್ತೆಯರನ್ನು ಬಳಸಿಕೊಂಡು ಮನೆಗಳಿಗೆ ತೆರಳಿ ಮಾಹಿತಿ ಸಂಗ್ರಹಿಸುವ ಕಾರ್ಯವಾಗಬೇಕು ಎಂದು ಅವರು ಹೇಳಿದರು.
ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾಹಿತಿ ನೀಡಿ, ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಿಸುವ ಸಲುವಾಗಿ ಹಲವಾರು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಮಾಣ ಶೇ.11 ರಷ್ಟಿದೆ. ಶೇ. 1.2 ರಷ್ಟು ಮರಣ ಪ್ರಮಾಣವಿದೆ ಎಂದು ಮುಖ್ಯಮಂತ್ರಿ ಅವರಿಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ 1 ದಿನಕ್ಕೆ 450 ಸಂಖ್ಯೆಯಲ್ಲಿ ಕೋವಿಡ್-19 ಪರೀಕ್ಷೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಮನೆ ಮನೆಗೆ ತೆರಳಿ ಕೋವಿಡ್ ಸಂಬಂಧ ಸಮೀಕ್ಷಾ ಕಾರ್ಯ ನಡೆಸಲಾಗುತ್ತಿದೆ. 56 ಹಾಸಿಗೆಯ ಐಸಿಯುವನ್ನು ಚಿಕಿತ್ಸೆಗಾಗಿ ಮೀಸಲಿರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ಒದಗಿಸಿದರು.
ಜಿಲ್ಲೆಯಲ್ಲಿ ವೈದ್ಯರ ಕೊರತೆ ಇದೆ. ಹಾಗೆಯೇ ಮಂಡ್ಯ, ಮೈಸೂರು, ಹಾಸನ ಜಿಲ್ಲೆಗಳಿಂದಲೂ ಸಹ ಕೋವಿಡ್-19 ಚಿಕಿತ್ಸೆಗಾಗಿ ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ತಜ್ಞ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳನ್ನು ಜಿಲ್ಲೆಗೆ ನೀಡುವಂತೆ ಮುಖ್ಯಮಂತ್ರಿ ಅವರಿಗೆ ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು.
ಮಳೆ ಹಾನಿ ಸಂಬಂಧ ಮಾಹಿತಿ ನೀಡಿದ ಅನೀಸ್ ಕಣ್ಮಣಿ ಜಾಯ್ ಅವರು, ಜಿಲ್ಲೆಯ 3 ತಾಲೂಕುಗಳ 115 ಗ್ರಾಮಗಳು ಮನೆಯಿಂದ ಹಾನಿಗೊಳಗಾಗಿದೆ. ರಸ್ತೆ, ಸೇತುವೆ, ವಿದ್ಯುತ್ ಸೇರಿದಂತೆ ವಿವಿಧ ಇಲಾಖೆಗಳ ಎಂಜಿನಿಯರಿಂಗ್ ವಿಭಾಗದಿಂದ 600 ಕೋಟಿ ರೂ. ಮೂಲ ಸೌಕರ್ಯ ಹಾನಿ ಅಂದಾಜಿಸಲಾಗಿದೆ. ಕೃಷಿ, ತೋಟಗಾರಿಕೆ ಸೇರಿದಂತೆ 41 ಸಾವಿರ ಹೆಕ್ಟೇರ್ ಬೆಳೆ ಹಾನಿ ಸಂಭವಿಸಿದೆ ಎಂದು ಅನೀಸ್ ಕಣ್ಮಣಿ ಜಾಯ್ ಅವರು ಮಾಹಿತಿ ನೀಡಿದರು.
ಆಗಸ್ಟ್ ಮೊದಲ ವಾರದಲ್ಲಿ ಸುರಿದ ಮಳೆಯಿಂದಾಗಿ 346 ಮನೆಗಳಿಗೆ ಹಾನಿಯಾಗಿದ್ದು, 12 ಮನೆಗಳು ಸಂಪೂರ್ಣವಾಗಿ ಹಾನಿಯಾಗಿದೆ. ಜಿಲ್ಲೆಯಲ್ಲಿ ಭೂಕುಸಿತದಿಂದಾಗಿ 5 ಮಂದಿ ಕಾಣೆಯಾಗಿದ್ದರು. ಈ ಪೈಕಿ 3 ಜನರ ಮೃತದೇಹಗಳು ಪತ್ತೆಯಾಗಿದ್ದು, ಕುಟುಂಬಸ್ಥರಿಗೆ ಪರಿಹಾರ ವಿತರಣೆ ಮಾಡಲಾಗಿದೆ. 2 ಮಂದಿ ಕಣ್ಮರೆಯಾಗಿದ್ದು, ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಉಳಿದ ಎರಡು ವ್ಯಕ್ತಿಗಳ ಕುಟುಂಬಕ್ಕೂ ಸಹ ಪರಿಹಾರ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. 17 ಜಾನುವಾರುಗಳು ಸಾವನ್ನಪ್ಪಿದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.
ಜಿ.ಪಂ ಸಿಇಒ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಆರ್‍ಸಿಎಚ್ ಅಧಿಕಾರಿ ಡಾ.ಗೋಪಿನಾಥ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಮುದಾಯ ಆರೋಗ್ಯ ವೈದ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಮಹೇಶ್, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಅನನ್ಯ ವಾಸುದೇವ ಇತರರು ಹಾಜರಿದ್ದರು.

error: Content is protected !!