ಅತಿಯಾಯಿತು ಮಳೆ : ಹಾರಂಗಿ ಅಣೆಕಟ್ಟೆಯಿಂದ ನದಿಗೆ ನೀರು ಬಿಡುಗಡೆ

19/09/2020

ಮಡಿಕೇರಿ : ಕೊಡಗಿನ ಪ್ರಮುಖ ಜಲಾಶಯವಾದ ಹಾರಂಗಿ ಅಣೆಕಟ್ಟೆ ಮತ್ತೊಮ್ಮೆ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇದರಿಂದಾಗಿ ಅಣೆಕಟ್ಟೆಯ ಕೆಳಭಾಗದಲ್ಲಿ ಹಾಗೂ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಅಧಿಕವಾಗುತ್ತಿದೆ.
ಕಳೆದ ಕೆಲವು ದಿನಗಳಿಂದ ಜಲಾನಯನ ಪ್ರದೇಶದಲ್ಲಿ ಬೀಳುತ್ತಿರುವ ಮಳೆಯಿಂದಾಗಿ ಅಣೆಕಟ್ಟೆಗೆ ಒಳ ಹರಿವಿನ ಪ್ರಮಾಣ ಹೆಚ್ಚಾಗಿದ್ದು, ಪರಿಣಾಮವಾಗಿ ಜಲಾಶಯ ತನ್ನ ನಿಗದಿತ ಮಟ್ಟವನ್ನು ತಲುಪಿದೆ. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ನೀರನ್ನು ಶನಿವಾರದಿಂದ ನದಿಗೆ ಬಿಡಲಾಗುತ್ತಿದೆ.
ಜಲಾಶಯಕ್ಕೆ ಪ್ರಸಕ್ತ 4,500 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಇದರಲ್ಲಿ ನಾಲೆಗೆ 700 ಕ್ಯುಸೆಕ್ ಹಾಗೂ ನದಿಗೆ 2000 ಕ್ಯುಸೆಕ್ ನೀರನ್ನು ಹರಿಸಲಾಗುತ್ತಿದೆ.
ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಳಹರಿವಿನ ಪ್ರಮಾಣವನ್ನು ನೋಡಿಕೊಂಡು ಮುಂದೆ ಅಣೆಕಟ್ಟೆಯ ಕ್ರಸ್ಟ್‍ಗೇಟ್ ಮೂಲಕ ಹೆಚ್ಚುವರಿ ನೀರನ್ನು ಹರಿಸಲಾಗುತ್ತದೆ ಎಂದು ಹಾರಂಗಿ ನೀರಾವರಿ ವಿಭಾಗದ ಕಾರ್ಯಪಾಲಕ ಅಭಿಯಂತರ ಮಹೇಂದ್ರ ಕುಮಾರ ತಿಳಿಸಿದ್ದಾರೆ.