ಸುವರ್ಣ ಸೌಧದಲ್ಲಿ ವಾಟಾಳ್ ಪ್ರತಿಭಟನೆ

22/09/2020

ಬೆಳಗಾವಿ ಸೆ.22 : ಬೆಳಗಾವಿಯ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸಬೇಕೆಂದು ಆಗ್ರಹಿಸಿ ಹೋರಾಟ ನಡೆಸಲು ಕೆಎಸ್ ಆರ್ ಟಿ ಸಿ ಬಸ್ಸಿನಲ್ಲಿ ಪೊಲೀಸರ ಕಣ್ತಪ್ಪಿಸಿ ಬೆಳಗಾವಿ ಸುವರ್ಣಸೌಧಕ್ಕೆ ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಗಮಿಸಿ ಪ್ರತಿಭಟನೆ ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ವೇಳೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವಾಟಾಳ್ ನಾಗರಾಜ್, ಸರ್ಕಾರ ಕೊರೋನಾ ನಿಯಂತ್ರಿಸುವಲ್ಲಿ ವಿಫಲವಾಗಿದೆ. ಜನರು ಸೋಂಕಿಗೆ ಬಲಿಯಾಗುತ್ತಿದ್ದರೂ ಸರ್ಕಾರ ಸುಮ್ಮನಿದೆ. ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚರ್ಚಿಸಲು ಬೆಳಗಾವಿಯ ಸುವರ್ಣ ಸೌಧದಲ್ಲಿ ಅಧಿವೇಶನ ಕರೆಯಬೇಕು ಎಂದು ಆಗ್ರಹಿಸಿದರು.
ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಸುವರ್ಣಸೌಧ ನಿರ್ಮಾಣದ ಉದ್ದೇಶ ಏನು? ಕಳೆದ ಎರಡು ವರ್ಷಗಳಿಂದ ಸುವರ್ಣಸೌಧದಲ್ಲಿ ಸಭೆ ನಡೆಸಿಲ್ಲ. ಉತ್ತರ ಕರ್ನಾಟಕ ಭಾಗವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಮಳೆ, ಅತಿವೃಷ್ಟಿಯಿಂದ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ತತ್ತರಿಸಿವೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.