ಪರಿಶಿಷ್ಟ ಜಾತಿ, ಪಂಗಡ ಉಪ ಯೋಜನೆ : ಅನುದಾನ ಬಳಕೆಗೆ ಜಿಲ್ಲಾಧಿಕಾರಿ ಸೂಚನೆ : ಕ್ರಮದ ಎಚ್ಚರಿಕೆ

September 23, 2020

ಮಡಿಕೇರಿ ಸೆ.23 : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನವನ್ನು ಕಾಲ ಮಿತಿಯೊಳಗೆ ಬಳಕೆ ಮಾಡಬೇಕು. ಇಲ್ಲದಿದ್ದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಎಚ್ಚರಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಬಗ್ಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ವಿವಿಧ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಬಳಸದಿದ್ದಲ್ಲಿ ಕಠಿಣ ಕ್ರಮ ಎದುರಿಸಬೇಕಾಗುತ್ತದೆ. ಈ ಯೋಜನೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಪ್ರಸಕ್ತ ಸಾಲಿನಲ್ಲಿ ಎಸ್ಸಿಪಿ/ಟಿಎಸ್ಪಿ ಯೋಜನೆಯಡಿ ಬಿಡುಗಡೆಯಾದ ಅನುದಾನ ಖರ್ಚುಮಾಡಬೇಕು. ಸಭೆಗೆ ನಿಖರ ಮಾಹಿತಿ ನೀಡಬೇಕು. ತಪ್ಪು ಮಾಹಿತಿ ಒದಗಿಸಿದ್ದಲ್ಲಿ ತಾವೇ ಜವಾಬ್ದಾರರು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಅವರು ಮಾತನಾಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿಯ ಕಾರ್ಯಕ್ರಮ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಅವರು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ, ಐಟಿಡಿಪಿ ಇಲಾಖೆ ಅಧಿಕಾರಿ ಸಿ.ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ನಿಂಗರಾಜಪ್ಪ ಅವರು ಹಲವು ಮಾಹಿತಿ ನೀಡಿದರು.
ಜಿ.ಪಂ.ಯೋಜನಾ ನಿರ್ದೇಶಕರಾದ ಶ್ರೀಕಂಠಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಡಳಿತಾಧಿಕಾರಿ ಡಾ.ನಂಜುಂಡೇಗೌಡ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪಿ.ಎಸ್ ಮಚ್ಚಾಡೋ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಾದ ಗೌರವ್ ಕುಮಾರ್ ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಅರುಂಧತಿ, ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕರಾದ ಸುರೇಶ್ ಭಟ್, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಘವೇಂದ್ರ, ತಾ.ಪಂ.ಇಒಗಳಾದ ಷಣ್ಮುಗ, ಸುನಿಲ್ ಕುಮಾರ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಶೇಖರ್, ಪ.ಪಂ.ಮುಖ್ಯಾಧಿಕಾರಿಗಳಾದ ನಾಚಪ್ಪ, ಶ್ರೀಧರ್ ಅವರು ತಮ್ಮ ಇಲಾಖೆ ವ್ಯಾಪ್ತಿಯ ಕಾರ್ಯಕ್ರಮದ ಪ್ರಗತಿ ಬಗ್ಗೆ ಮಾಹಿತಿ ನೀಡಿದರು.