ಮಾಜಿ ಸಚಿವ ಜಸ್ವಂತ್ ಸಿಂಗ್ ನಿಧನ

28/09/2020

ನವದೆಹಲಿ ಸೆ.28 : ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಅವರು ಭಾನುವಾರ ಬೆಳಿಗ್ಗೆ ವಿಧಿವಶರಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಇತರೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಜಸ್ವಂತ್ ಸಿಂಗ್ ಅವರಿಗೆ 82 ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಜೂನ್.25 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮಲ್ಟಿಆರ್ಗನ್ ಡಿಸ್ಫಂಕ್ಷನ್ ಸಿಂಡ್ರೋಮ್’ನಿಂದ ಜಸ್ವಂತ್ ಅವರು ಬಳಲುತ್ತಿದ್ದರು. ಇದರಂತೆ ಇಂದು ಬೆಳಿಗ್ಗೆ ಹೃದಯಸ್ತಂಭನ ಎದುರಾಗಿ ಬೆಳಿಗ್ಗೆ 6.55ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಜಸ್ವಂತ್ ಅವರಿಗೆ ಕೊರೋನಾ ಸೋಂಕು ತಗುಲಿರಲಿಲ್ಲ ಎಂದು ದೆಹಲಿಯ ಸೇನಾ ಆಸ್ಪತ್ರೆ ಮಾಹಿತಿ ನೀಡಿದೆ.
ಜಸ್ವಂತ್ ಸಿಂಗ್ ಅವರು ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು ಸಂತಾಪ ಸೂಚಿಸಿದ್ದಾರೆ.