ರಾಜ್ಯದ ವಿವಿಧೆಡೆ ಬಂದ್‍ಗೆ ಸ್ಪಂದನೆ

29/09/2020

ಬೆಂಗಳೂರು ಸೆ.29 : ರೈತ, ಕಾರ್ಮಿಕ ವಿರೋಧಿ ವಿಧೇಯಕಗಳನ್ನು ಜಾರಿಗೊಳಿಸುತ್ತಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ರೈತಪರ, ಕಾರ್ಮಿಕ, ದಲಿತ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಂಗಳೂರಿನಲ್ಲಿ ಸಾವಿರಾರು ಮಂದಿ ವಿವಿಧ ಕಡೆಗಳಿಂದ ಮೆರವಣಿಗೆ ಮೂಲಕ ಟೌನ್ ಹಾಲ್ ಬಳಿ ಜಮಾವಣೆಗೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ವಿವಿಧ ಕಲಾವಿದರು ಪ್ರತಿಭಟನೆಯ ಕಿಚ್ಚನ್ನು ಹೆಚ್ಚಿಸುತ್ತಿದ್ದಾರೆ. ರೈತರಿಗೆ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು, ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಕೂಡ ಸಾಥ್ ನೀಡಿದ್ದಾರೆ.
ಪುರಭವನದ ಬಳಿ ರೈತರ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ಇದು ಸಾಂಕೇತಿಕ ಪ್ರತಿಭಟನೆ. ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಹೋರಾಟ ತೀವ್ರಗೊಳಿಸುತ್ತೇವೆ. ಹೊಟೇಲ್ ಉದ್ಯಮದವರು ನಮ್ಮ ಪ್ರತಿಭಟನೆಗೆ ಬೆಂಬಲ ನೀಡಬೇಕಿತ್ತು. ನಾವು ಬೆಳೆದ ಅನ್ನ ಮಾರಿ ಬದುಕುತ್ತಿರುವ ನೀವು ನಮಗೆ ಬೆಂಬಲ ನೀಡಬೇಕಿತ್ತು ಎಂಬ ಆಕ್ರೋಶ ವ್ಯಕ್ತಪಡಿಸಿದರು.
ಕೃಷಿಗೆ ಮಾರಕವಾದ ರೈತರಿಗೆ ಮರಣಶಾಸನವಾದ ಈ ಕಾಯ್ದೆಗಳನ್ನು ಸರ್ಕಾರ ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದು ಅವರು ಈ ಸಂದರ್ಭದಲ್ಲಿ ಆಗ್ರಹಿಸಿದರು.