ಸರ್ಕಾರದ ವಿರುದ್ಧ ಸಿಪಿಐಎಂ ಪ್ರತಿಭಟನೆ : ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಮಡಿಕೇರಿ ಸೆ.30 : ಸರ್ಕಾರ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷದ(ಮಾಕ್ರ್ಸ್‍ವಾದಿ) ಕೊಡಗು ಜಿಲ್ಲಾ ಘಟಕ ನಗರದಲ್ಲಿ ಪ್ರತಿಭಟನೆ ನಡೆಸಿತು.
ಜಿಲ್ಲಾಧಿಕಾರಿ ಕಚೇರಿ ಎದುರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ಪಕ್ಷದ ಜಿಲ್ಲಾ ಕಾರ್ಯದರ್ಶಿ ಡಾ.ಈ.ರಾ.ದುರ್ಗಾಪ್ರಸಾದ್, ಕೇಂದ್ರ ಮತ್ತು ರಾಜ್ಯ ಸರ್ಕಾರ ನಿರಂತರವಾಗಿ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಜನಸಾಮಾನ್ಯರಿಗೆ ಹೊರೆಯಾಗುವ ಕಾಯ್ದೆಗಳನ್ನು ಜಾರಿಗೆ ತರುತ್ತಿದೆ ಎಂದು ಆರೋಪಿಸಿದರು.
ಜನಪರ ಹೋರಾಟಗಳನ್ನು ನಡೆಸಿಕೊಂಡು ಬರುತ್ತಿರುವ ಸಿಪಿಐಎಂ ಪಕ್ಷದ ವಿರುದ್ಧ ದೆಹಲಿ ಪ್ರತಿಭಟನೆಯನ್ನು ನೆಪವಾಗಿರಿಸಿಕೊಂಡು ದೂರು ದಾಖಲಿಸಲಾಗಿದೆ. ಸರ್ವಾಧಿಕಾರಿ ಧೋರಣೆಯನ್ನು ಪ್ರದರ್ಶಿಸುತ್ತಿರುವ ಸರ್ಕಾರ ತಕ್ಷಣ ಮೊಕದ್ದಮೆಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು.
::: ಬೇಡಿಕೆಗಳು :::
ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ಎಲ್ಲಾ ಕುಟುಂಬಗಳಿಗೆ ಮುಂದಿನ ಆರು ತಿಂಗಳ ಕಾಲ ತಲಾ 7,500 ರೂ. ಗಳ ಸಹಾಯಧನ ಬಿಡುಗಡೆ ಮಾಡಬೇಕು, ಆರು ತಿಂಗಳವರೆಗೆ ತಲಾ 10 ಕೆ.ಜಿ. ಆಹಾರಧಾನ್ಯವನ್ನು ನೀಡಬೇಕು, ಆರೋಗ್ಯ ಸುರಕ್ಷತಾ ಕ್ರಮಗಳನ್ನು ಉಚಿತವಾಗಿ ಕೈಗೊಳ್ಳಬೇಕು, ಎಲ್ಲಾ ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆಯನ್ನು ನೀಡಬೇಕು, ಭಾರತದ ಸಂವಿಧಾನ ಮತ್ತು ಅದರಲ್ಲಿನ ಮೂಲ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ, ಸೌಹಾರ್ದತೆಯನ್ನು ರಕ್ಷಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಪಕ್ಷದ ಪ್ರಮುಖರಾದ ಎ.ಸಿ.ಸಾಬು, ಪಿ.ಆರ್.ಭರತ್, ಶಿವಪ್ಪ, ರಮೇಶ್, ಗಣೇಶ್, ಕುಟ್ಟಪ್ಪ, ಮಹದೇವ್, ಅಶ್ರಫ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

