ಜಿಲ್ಲಾ ಆಸ್ಪತ್ರೆಯಲ್ಲಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಬಾಹ್ಯ ಕೇಂದ್ರ ಉದ್ಘಾಟನೆ

03/10/2020

ಮಡಿಕೇರಿ ಅ. 3 : ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಒಂದು ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಬಾಹ್ಯ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಶನಿವಾರ ಉದ್ಘಾಟಿಸಿದರು.
ಕೇಂದ್ರವನ್ನು ಉದ್ಧಾಟಿಸಿ ಮಾತನಾಡಿದ ಸಚಿವರು, ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಸಂಪೂರ್ಣಧನ ಸಹಾಯದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸ್ವಾಯತ್ತ ಸಂಸ್ಥೆಯಾಗಿದ್ದು, ಕಳೆದ 5 ದಶಕಗಳಿಂದಲೂ ವಾಕ್ ಮತ್ತು ಶ್ರವಣ ಸಮಸ್ಯೆಗಳನ್ನು ಹೊಂದಿರುವ ಜನರ ಅಗತ್ಯತೆಗಳನ್ನು ಪೂರೈಸುತ್ತಾ ಬಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ತಿಳಿಸಿದರು.

ಮಾನವ ಸಂಪನ್ಮೂಲ ಅಭಿವೃದ್ಧಿ, ಸಂಶೋಧನೆ, ಮತ್ತು ಸಂವಹನ ಸಮಸ್ಯೆ ಹೊಂದಿರುವ ವ್ಯಕ್ತಿಗಳಿಗೆ ಕ್ಲಿನಿಕಲ್ ಸೇವೆಗಳನ್ನು ಒದಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ. 2011ರ ಜನಗಣತಿಯ ಜನಸಂಖ್ಯೆಯ ಶೇ. 2.71 ರಷ್ಟು ಜನರು ಹಲವು ರೀತಿಯ ಅಂಗವೈಕಲ್ಯದಿಂದ ಬಳಲುತ್ತಿದ್ದು, ಇದರಲ್ಲಿ ಹೆಚ್ಚು ಪಾಲು ಮಕ್ಕಳು ಮತ್ತು ವಯಸ್ಕರು ಕಿವುಡುತನದಿಂದ ಬಳಲುತ್ತಿರುವ ವರದಿಯಿದೆ ಎಂದರು.
ಸಂಸ್ಥೆಯು ಮುಖ್ಯವಾಗಿ ನವಜಾತ ಶಿಶುಗಳಲ್ಲಿ ವಾಕ್ ಮತ್ತು ಶ್ರವಣ ದೋಷವಿದ್ದರೆ 5 ನಿಮಿಷಗಳಿಗಿಂತ ಕಡಿಮೆ ಅವಧಿಯಲ್ಲಿ ಅದನ್ನು ಪತ್ತೆ ಹಚ್ಚುವ ಕಲಸವನ್ನು ಮಾಡುತ್ತದೆ. ಈ ಎಲ್ಲಾ ಸೇವೆಗಳನ್ನು ಸಂಸ್ಥೆಯು ಉಚಿತವಾಗಿ ಒದಗಿಸುತ್ತಿರುವುದು ಗಮನಾರ್ಹವಾಗಿದೆ. ಆದ್ದರಿಂದ ಕೊಡಗಿನ ಜನರಿಗೆ ಸೇವೆ ಸಲ್ಲಿಸುವ ಸಲುವಾಗಿ ಸಂಸ್ಥೆಯು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಯೋಗದೊಂದಿಗೆ ಒಎಸ್‍ಸಿ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದರು. ಕೊಡಗಿನ ಎಲ್ಲಾ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.
ಕಾರ್ಯಕ್ರಮದಲ್ಲಿ ಸಚಿವರೊಡನೆ ಶಾಸಕರುಗಳಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ಸಂಸದರಾದ ಪ್ರತಾಪ್ ಸಿಂಹ, ಪರಿಷತ್ ಸದಸ್ಯರಾದ ಸುನಿಲ್ ಸುಬ್ರಹ್ಮಣ್ಯ, ವೀಣಾ ಅಚ್ಚಯ್ಯ, ವಾಕ್ ಶ್ರವಣ ಸಂಸ್ಥೆಯ ನಿರ್ದೇಶಕಿ ಡಾ.ಪುಷ್ಟವತಿ, ಪಿಓಸಿಡಿ ಎಚ್ ಓಡಿ ಡಾ.ಶ್ರೀಧರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಕೊಡಗು ಜಿಲ್ಲಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮುಖ್ಯಸ್ಥ ಕಾರ್ಯಪ್ಪ ಇತರರು ಇದ್ದರು.
ಬಳಿಕ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ ಅವರು ಶ್ರವಣ ಸಾಧನಗಳನ್ನು ವಿತರಿಸಿದರು.