ಮಾಸ್ಕ್ ಬಳಸದವರಿಗೆ ದಂಡ ವಿಧಿಸಲು ಕೊಡಗು ಜಿಲ್ಲಾಧಿಕಾರಿ ಸೂಚನೆ

05/10/2020

ಮಡಿಕೇರಿ ಅ.5 : ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮಾಸ್ಕ್ ಬಳಕೆ ಬಗ್ಗೆ ಅರಿವು ಮೂಡಿಸಬೇಕು. ಜೊತೆಗೆ ಮಾಸ್ಕ್‍ನ್ನು ಸರಿಯಾಗಿ ಬಳಸದಿದ್ದಲ್ಲಿ ಅಂತಹವರಿಗೆ ದಂಡ ವಿಧಿಸಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯ ವಿಡಿಯೊ ಕಾನ್ಫ್‍ರೆನ್ಸ್ ಸಭಾಂಗಣದಲ್ಲಿ ನಡೆದ ವಿಡಿಯೊ ಕಾನ್ಫ್‍ರೆನ್ಸ್ ಮೂಲಕ ಮಾಹಿತಿ ಪಡೆದು ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣ ಹೆಚ್ಚಳವಾಗಿತ್ತಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಕಡ್ಡಾಯವಾಗಿ ಪ್ರತಿಯೊಬ್ಬರೂ ಮನೆಯಿಂದ ಹೊರಡುವಾಗ ಸರಿಯಾಗಿ ಮಾಸ್ಕ್ ಧರಿಸಬೇಕು, ಆಗಾಗ ಸಾಬೂನಿನಿಂದ ಕೈತೊಳೆಯಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಜೊತೆಗೆ ಸಂತೆ ದಿನಗಳಲ್ಲಿ ಅಂತರ ಕಾಯ್ದುಕೊಳ್ಳುತ್ತಿದ್ದಾರೆಯೇ ಎಂಬುದನ್ನು ಗಮನಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಮಾಸ್ಕ್‍ನ್ನು ಸರಿಯಾಗಿ ಬಳಸದಿರುವವರಿಗೆ ದಂಡ ವಿಧಿಸುವಾಗ ಪೊಲೀಸ್ ಇಲಾಖೆಯ ಸಹಕಾರ ಪಡೆದುಕೊಳ್ಳಬೇಕು. ದಂಡ ವಸೂಲಿ ಸಂಬಂಧಿಸಿದಂತೆ ಛಾಯಾಚಿತ್ರ ಸಹಿತ ಕಾರ್ಯ ಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಕೋವಿಡ್‍ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಯಾವುದೇ ಹಣ ಬಿಡುಗಡೆಯಾಗುತ್ತಿಲ್ಲ. ಈ ಬಗ್ಗೆ ಮಾಹಿತಿ ನೀಡಬೇಕು ಎಂದು ಅನೀಸ್ ಕಣ್ಮಣಿ ಜಾಯ್ ಅವರು ಹೇಳಿದರು.
ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಅವರು ಜನದಟ್ಟಣೆ ಹಾಗೂ ಕೋವಿಡ್ ಪ್ರಕರಣ ಹೆಚ್ಚು ಕಂಡು ಬರುವ ಪ್ರದೇಶಗಳಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಬೇಕು. ಎಂದು ಅವರು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ ಅವರು ಮಾತನಾಡಿ ತಹಶೀಲ್ದಾರರು, ಇಒಗಳು ಹಾಗೂ ಸ್ಥಳೀಯ ಸಂಸ್ಥೆಯ ಅದಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಪ್ರಾಥಮಿಕ ಸಂಪರ್ಕಿತರನ್ನು ಗುರ್ತಿಸಿ ಕೋವಿಡ್ ಪರೀಕ್ಷೆ ಮಾಡಿಸಬೇಕು. ಜನದಟ್ಟಣೆ ಪ್ರದೇಶಗಳಲ್ಲಿ ಮನೆ ಮನೆಗೆ ತೆರಳಿ ಹೆಚ್ಚಿನ ಕೋವಿಡ್ ಪರೀಕ್ಷೆ ಮಾಡಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ಮಾತನಾಡಿ ಕೋವಿಡ್-19 ಕಂಡುಬಂದಲ್ಲಿ ಪ್ರಾಥಮಿಕ ಸಂಪರ್ಕಿತರನ್ನು ಕೋವಿಡ್ ಪರೀಕ್ಷೆ ಮಾಡಬೇಕಿದೆ ಎಂದರು.
ಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ.ಮಹೇಶ್ ಅವರು ದ್ವಿತೀಯ ಸಂಪರ್ಕಿತರಲ್ಲಿ ರೋಗ ಲಕ್ಷಣಗಳು ಕಂಡುಬಂದಲ್ಲಿ ಪರೀಕ್ಷೆ ಮಾಡಿಸಬೇಕು ಎಂದರು. ಹಾಗೆಯೇ ಯಾವುದೇ ರೀತಿಯ ವಾಹನಗಳಲ್ಲಿ ಒಬ್ಬರಿಗಿಂತ ಹೆಚ್ಚಿನ ಪ್ರಯಾಣಿಕರಿದ್ದಲ್ಲಿ ಮಾಸ್ಕ್‍ನ್ನು ಕಡ್ಡಾಯವಾಗಿ ಧರಿಸಬೇಕು ಎಂದು ಅವರು ಹೇಳಿದರು.
ಡಿವೈಎಸ್ಪಿ ದಿನೇಶ್ ಕುಮಾರ್, ತಹಶೀಲ್ದಾರರಾದ ಮಹೇಶ್, ಗೋವಿಂದ ರಾಜು, ನಂದೀಶ್, ಪೌರಾಯುಕ್ತರಾದ ರಾಮ್‍ದಾಸ್, ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳಾದ ಡಾ.ಆನಂದ್, ಡಾ.ಗೋಪಿನಾಥ್, ನಗರಾಭಿವೃದ್ಧಿ ಕೋಶದ ಯೋಜನಾ ನಿದೇಶಕರಾದ ರಾಜು, ಪ.ಪಂ.ಮುಖ್ಯಾಧಿಕಾರಿಗಳು, ಪಿಡಿಒಗಳು ಇತರರು ಹಾಜರಿದ್ದರು.