ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸಚಿವ ಡಾ.ಕೆ.ಸುಧಾಕರ್ ಭೇಟಿ : ಪರಿಶೀಲನೆ

06/10/2020

ಮಡಿಕೇರಿ ಅ. 6 : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಬಾಕಿ ಇರುವ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ಸೂಚನೆ ನೀಡಿದ್ದಾರೆ.
ನಗರದ ಹೊರವಲಯದಲ್ಲಿರುವ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಮಂಗಳವಾರ ಭೇಟಿ ನೀಡಿ ಸಚಿವರು ಪರಿಶೀಲನೆ ನಡೆಸಿದರು.
ಸಾಕಷ್ಟು ಹಿಂದೆಯೇ ಈ ವೈದ್ಯಕೀಯ ಕಾಲೇಜಿನ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಆದರೆ ಈವರೆಗೂ ಸಂಪೂರ್ಣವಾಗಿ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳದಿರುವ ಬಗ್ಗೆ ಸಚಿವರು ಅಸಮಧಾನ ವ್ಯಕ್ತಪಡಿಸಿದರು. ಇದೇ ವೇಳೆ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಎ, ಬಿ ಮತ್ತು ಸಿ ಬ್ಲಾಕ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭ ವಿದ್ಯಾರ್ಥಿಗಳು ಸಚಿವರನ್ನು ಭೇಟಿ ಮಾಡಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸೂಕ್ತ ಬಸ್ ವ್ಯವಸ್ಥೆ ಮತ್ತು ಆಟದ ಮೈದಾನವನ್ನು ಕಲ್ಪಿಸಿಕೊಡುವಂತೆ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು ಈ ಬಗ್ಗೆ ಕೆ.ಎಸ್.ಆರ್.ಟಿ.ಸಿ ಡಿಸಿ ಅವರೊಂದಿಗೆ ಮಾತನಾಡಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಮಾಡುವ ಬಗ್ಗೆ ಕ್ರಮ ವಹಿಸಲಾಗುವುದು. ಆಟದ ಮೈದಾನಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಜೊತೆಗೆ ವೈದ್ಯಕೀಯ ಕಾಲೇಜಿನ ನಿರ್ದೇಶಕರು, ಆಡಳಿತಾಧಿಕಾರಿಗಳು ಕಾಲೇಜಿನ ಆಡಳಿತವನ್ನು ಮತ್ತಷ್ಟು ಚುರುಕುಗೊಳಿಸಬೇಕಿದೆ ಎಂದು ಅವರು ಸಲಹೆ ನೀಡಿದರು.
ಶಾಸಕರಾದ ಅಪ್ಪಚ್ಚು ರಂಜನ್, ಕೊಡಗು ವೈದ್ಯಕೀಯ ಕಾಲೇಜ್ ನ ನಿರ್ದೇಶಕರಾದ ಡಾ.ಕಾರ್ಯಪ್ಪ, ಅಧೀಕ್ಷಕರಾದ ಡಾ.ಲೋಕೇಶ್, ಆಡಳಿತಾಧಿಕಾರಿ ಡಾ.ನಂಜುಂಡೇಗೌಡ ಇತರರು ಇದ್ದರು.